SHIVAMOGGA LIVE NEWS, 4 JANUARY 2024
ಶಿವಮೊಗ್ಗ : ಬಜೆಟ್ ಅಧಿವೇಶನದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದಲ್ಲಿಯೆ ಚರ್ಚೆಯಾಗುತ್ತಿದೆ. ಇದೆ ಕಾರಣಕ್ಕೆ ಔತಣಕೂಟದ (Dinner Meeting) ಮೂಲಕ ಸಿದ್ದರಾಮಯ್ಯ ರಾಜಕೀಯ ಧಾಳ ಉರುಳಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿನ ಡಿನ್ನರ್ ಮೀಟಿಂಗ್ ಕುರಿತು ಮಾತನಾಡಿದರು.
ವಿಜಯೇಂದ್ರ ಹೇಳಿದ 3 ಪ್ರಮುಖ ಪಾಯಿಂಟ್
‘ಕಾಂಗ್ರೆಸ್ ಪಕ್ಷದಲ್ಲಿ ಸಿದ್ಧ ವರ್ಸಸ್ ಸಿದ್ಧʼ
ಬಜೆಟ್ ಬಳಿಕ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಕಾಂಗ್ರೆಸ್‌ನಲ್ಲಿ ಚರ್ಚೆ ಆಗುತ್ತಿದೆ. ಇದೆ ಕಾರಣಕ್ಕೆ ಔತಣಕೂಟದ ಮೂಲಕ ರಾಜಕೀಯ ಧಾಳ ಉರುಳಿಸಿದ್ದಾರೆ. ಸಿಎಂ ಸ್ಥಾನ ತ್ಯಜಿಸಲು ಸಿದ್ದರಾಮಯ್ಯ ಸಿದ್ಧರಿಲ್ಲ. ಅದೇ ರೀತಿ ಕಾಂಗ್ರೆಸ್‌ನಲ್ಲಿರುವ ವಿರೋಧಿ ಬಣ ಸಿದ್ಧರಾಮಯ್ಯ ಅವರನ್ನು ಸಿಎಂ ಸ್ಥಾನದಲ್ಲಿ ಉಳಿಸಲು ಸಿದ್ಧರಿಲ್ಲ. ಹಾಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಸಿದ್ಧ ವರ್ಸಸ್ ಸಿದ್ಧ ಸ್ಥಿತಿ ಇದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸಕ್ಕೆ ತೆರಳಿರುವ ಸಂದರ್ಭ, ಅವರ ಅನುಪಸ್ಥಿತಿಯಲ್ಲಿ ಔತಣಕೂಟ ಆಯೋಜಿಸಲಾಗಿದೆ ಎಂದು ವಿಜಯೇಂದ್ರ ಹೇಳಿದರು.
‘ಪ್ರಿಯಾಂಕ್ ಖರ್ಗೆ ಅವರೆ ಸಿದ್ದರಾಮಯ್ಯರನ್ನ ನಂಬಬೇಡಿ’
ಡಿಸೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ತನಿಖೆಯಾಗಿ ಸಚಿವ ಕೆ.ಜಿ.ಜಾರ್ಜ್ ನಿರ್ದೋಷಿಯಾಗಿದ್ದಾರೆ. ಅದೆ ರೀತಿ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಪ್ರಾಮಾಣಿಕರಾಗಿದ್ದರೆ ಸಿಬಿಐ ತನಿಖೆಗೆ ವಹಿಸಲಿ. ಕಾಂಗ್ರೆಸ್ ಪಕ್ಷದಲ್ಲಿಯೇ ಪ್ರಿಯಾಂಕ್ ಖರ್ಗೆ ವಿರೋಧಿಗಳಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಅವರನ್ನು ಈ ವಿಚಾರದಲ್ಲಿ ಅವರು ನಂಬುವುದು ಬೇಡ. ಸಿಬಿಐ ತನಿಖೆಯಾದರೆ ಸಚಿನ್ ಪಾಂಚಾಳ್ ಕುಟುಂಬಕ್ಕು ನ್ಯಾಯ ದೊರೆಯಲಿದೆ. ಪ್ರಾಮಾಣಿಕರಾಗಿದ್ದರೆ ಪ್ರಿಯಾಂಕ್ ಖರ್ಗೆ ಅವರಿಗು ನ್ಯಾಯ ದೊರೆಯಲಿದೆ ಎಂದ ವಿಜಯೇಂದ್ರ ಹೇಳಿದರು.
‘ಮಹಿಳೆಯರಿಗೆ ಉಚಿತ, ಪುರುಷರಿಗೆ ದರ ಹೆಚ್ಚಳ ಖಚಿತ’
ಶಕ್ತಿ ಯೋಜನೆಗೆ ಹಣ ಹೊಂದಿಸಲು ಸಾಧ್ಯವಾಗದೆ ಸಾರಿಗೆ ಸಂಸ್ಥೆಗಳು ಸಾವಿರಾರು ಕೋಟಿ ರೂ. ನಷ್ಟದಲ್ಲಿವೆ. ಸಂಸ್ಥೆಗಳನ್ನು ಮುಚ್ಚುವ ದುಸ್ಥಿತಿ ಇದೆ. ಈಗ ಶೇ.15ರಷ್ಟು ದರ ಹೆಚ್ಚಳ ಮಾಡಿದ್ದಾರೆ. ಮಹಿಳೆಯರಿಗೆ ಉಚಿತ, ಪುರುಷರಿಗೆ ದರ ಹೆಚ್ಚಳ ಖಚಿತ ಎಂಬಂತಾಗಿದೆ. ಒಂದು ಕೈಯಲ್ಲಿ ಕೊಟ್ಟು, ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವುದೆ ಗ್ಯಾರಂಟಿ ಯೋಜನೆ ಎಂಬ ನಮ್ಮ ಆರೋಪ ನಿಜವಾಗಿದೆ. ಹಿಮಾಚಲ ಪ್ರದೇಶ ಸರ್ಕಾರ ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಸಂಕಷ್ಟಕ್ಕೀಡಾಗಿದೆ. ಹಾಗಾಗಿ ಕರ್ನಾಟಕದ ಆರ್ಥಿಕ ಸ್ಥಿತಿಗತಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ವೇತಪತ್ರ ಹೊರಡಿಸಲಿ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಅನುದಾನವಿಲ್ಲದಾಗಿದೆ. ಕಾಂಗ್ರೆಸ್ ಸಚಿವರು, ಶಾಸಕರೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ವಿಜಯೇಂದ್ರ ಟೀಕಿಸಿದರು
ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಡಾ. ಧನಂಜಯ ಸರ್ಜಿ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ » ಯುದ್ಧ ಟ್ಯಾಂಕರ್‌ಗೆ ಕೊನಗೂ ಸಿಕ್ತು ‘ಫ್ರೀಡಂ’, ಇದು ಶಿವಮೊಗ್ಗ ಲೈವ್.ಕಾಂ ಇಂಪ್ಯಾಕ್ಟ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200