ಶಿವಮೊಗ್ಗ: ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಶಿವಮೊಗ್ಗ ಜಿಲ್ಲೆಯ ಸಾಲು ಸಾಲು ಪ್ರಮುಖ ನಾಯಕರು ಭೇಟಿಯಾಗಿ ಅಭಿನಂದನೆ ಸಲ್ಲಿಸುತ್ತಿದ್ದಾರೆ. ರಾಜ್ಯದಲ್ಲಿ ನೂತನ ಸರ್ಕಾರ ರಚನೆಯಾಗುತ್ತಿರುವ ಬೆನ್ನಲ್ಲೇ ನಡೆದಿರುವ ಈ ಸರಣಿ ಭೇಟಿಗಳು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿವೆ.
ಶಿವಮೊಗ್ಗದ ಹಿರಿಯ ಕಾಂಗ್ರೆಸ್ ನಾಯಕ ಎಂ. ಶ್ರೀಕಾಂತ್ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಅವರು ಜಂಟಿಯಾಗಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭ ಶಿವಮೊಗ್ಗ ಜಿಲ್ಲೆಯ ಸದ್ಯದ ರಾಜಕೀಯ ವಿದ್ಯಮಾನಗಳು ಹಾಗೂ ಮುಂಬರುವ ದಿನಗಳಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಪ್ರಮುಖ ಕ್ರಮಗಳ ಕುರಿತು ಸುದೀರ್ಘ ಚರ್ಚೆ ನಡೆದಿದೆ ಎನ್ನಲಾಗಿದೆ.

ಇನ್ನೊಂದೆಡೆ, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರೂ ಸಹ ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಶುಭ ಕೋರಿದರು. ಈ ಸಂದರ್ಭ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ ಅವರು ಉಪಸ್ಥಿತರಿದ್ದರು. ಷಡಾಕ್ಷರಿ ಅವರು ನೌಕರರ ಸಂಘದ ಪ್ರಮುಖ ಬೇಡಿಕೆಗಳ ಕುರಿತು ಚರ್ಚಿಸಿದರು. ಸಂಗಮೇಶ್ವರ ಅವರು ರಾಜಕೀಯ ಸಂಗತಿಗಳ ಕುರಿತು ಚರ್ಚೆ ನಡೆಸಿದರು.
ಸದ್ಯ ಬೆಂಗಳೂರಿನ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ ವಿವಿಧ ಜಿಲ್ಲೆಗಳ ನಾಯಕರು ಹಾಗೂ ಉನ್ನತ ಅಧಿಕಾರಿಗಳು ಭೇಟಿ ನೀಡುತ್ತಿದ್ದು, ಪ್ರತಿ ಭೇಟಿಯೂ ಹೊಸ ರಾಜಕೀಯ ಲೆಕ್ಕಾಚಾರಗಳಿಗೆ ಕಾರಣವಾಗುತ್ತಿದೆ.

