ಶಿವಮೊಗ್ಗ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ದೀಪಗಳ ನಿರ್ವಹಣೆಯಲ್ಲಿ ಅಧಿಕಾರಿಗಳ ಉದಾಸೀನತೆ ಮತ್ತು ಬೇಜವಾಬ್ದಾರಿತನವನ್ನು ಸಹಿಸುವುದಿಲ್ಲ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಎಚ್ಚರಿಕೆ ನೀಡಿದ್ದಾರೆ.
ಶಾಸಕರ ಕಚೇರಿ ಕರ್ತವ್ಯ ಭವನದಲ್ಲಿ ಮೆಸ್ಕಾಮ್ ಹಾಗೂ ಮಹಾನಗರ ಪಾಲಿಕೆಯ ವಿದ್ಯುತ್ ವಿಭಾಗದ ಅಧಿಕಾರಿಗಳೊಂದಿಗೆ ನಡೆದ ತುರ್ತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮೀಟಿಂಗ್‌ನಲ್ಲಿ ಏನೆಲ್ಲ ಚರ್ಚೆಯಾಯ್ತು?
ನಗರದ ವಿವಿಧ ಬಡಾವಣೆಗಳಲ್ಲಿ ಬೀದಿ ದೀಪಗಳು ಕೆಟ್ಟು ಹೋಗಿದ್ದರೂ ಸಕಾಲಕ್ಕೆ ದುರಸ್ತಿ ಮಾಡದ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ಸಾರ್ವಜನಿಕರಿಂದ ಬರುತ್ತಿರುವ ಸಾಲು ಸಾಲು ದೂರುಗಳನ್ನು ಸಭೆಯ ಗಮನಕ್ಕೆ ತಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ರಾತ್ರಿ ವೇಳೆ ಬೀದಿ ದೀಪಗಳು ಇರದಿರುವುದರಿಂದ ಸಾರ್ವಜನಿಕರು, ವಿಶೇಷವಾಗಿ ಮಹಿಳೆಯರು ಮತ್ತು ಹಿರಿಯ ನಾಗರಿಕರು ಸಂಚರಿಸಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಮತ್ತು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ತಕ್ಷಣವೇ ಕಾರ್ಯಪ್ರವೃತ್ತರಾಗಿ ನಗರದ ಎಲ್ಲಾ ಬೀದಿ ದೀಪಗಳು ಸರಿಯಾಗಿ ಉರಿಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿದರು.
ಗುತ್ತಿಗೆದಾರರ ವಿರುದ್ಧ ಶಿಸ್ತುಕ್ರಮಕ್ಕೆ ಸೂಚನೆ
ನಗರದ ಬೀದಿ ದೀಪಗಳ ದೈನಂದಿನ ನಿರ್ವಹಣೆಯ ಗುತ್ತಿಗೆ ಪಡೆದು, ನಿಯಮಾವಳಿಗಳ ಪ್ರಕಾರ ಸರಿಯಾಗಿ ಕೆಲಸ ಮಾಡದ ಗುತ್ತಿಗೆದಾರರ ವಿರುದ್ಧ ತಕ್ಷಣವೇ ಶಿಸ್ತುಕ್ರಮ ಕೈಗೊಳ್ಳಬೇಕು. ಇಲಾಖೆಯ ವತಿಯಿಂದ ನೋಟಿಸ್ ಜಾರಿ ಮಾಡಿ, ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ವಿದ್ಯುತ್ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳು, ಮಹಾನಗರ ಪಾಲಿಕೆಯ ವಿದ್ಯುತ್ ವಿಭಾಗದ ಅಧಿಕಾರಿಗಳು ಹಾಗೂ ಶಾಸಕರ ಕಾರ್ಯಾಲಯದ ಪ್ರಮುಖರು ಉಪಸ್ಥಿತರಿದ್ದರು.
