ಶಿವಮೊಗ್ಗ: ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರುವ ನೂತನ ಆಡಳಿತ ಸೌಧ ನಿರ್ಮಾಣಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಕೆ. ಗೌಡ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.
ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಅವರು, ಜಿಲ್ಲಾಧಿಕಾರಿ ಕಚೇರಿಯಿಂದ ಸರ್ಕಾರಕ್ಕೆ ಸಲ್ಲಿಕೆಯಾಗಿರುವ ಸವಿಸ್ತಾರ ಯೋಜನಾ ವರದಿ (ಡಿಪಿಆರ್) ಹಾಗೂ ಪೂರಕ ದಾಖಲೆಗಳ ಪ್ರತಿಗಳನ್ನು ಹಸ್ತಾಂತರಿಸಿದರು.

ನಗರದ ಹಲವು ಪ್ರಮುಖ ಸರ್ಕಾರಿ ಕಚೇರಿಗಳು ಸದ್ಯ ಖಾಸಗಿ ಕಟ್ಟಡಗಳಲ್ಲಿ ಬಾಡಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿವೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತಿದೆ. ವಿವಿಧೆಡೆ ಹಂಚಿಹೋಗಿರುವ ಕಚೇರಿಗಳಿಂದಾಗಿ ಸಾರ್ವಜನಿಕರು ಹಾಗೂ ರೈತರು ಅಲೆದಾಡುವಂತಾಗಿದೆ. ಮುಖ್ಯ ಬಸ್ ನಿಲ್ದಾಣದಿಂದ ಕೇವಲ 500 ಮೀಟರ್ ದೂರದಲ್ಲಿ ನೂತನ ಆಡಳಿತ ಸೌಧಕ್ಕೆ ಜಾಗ ಗುರುತಿಸಲಾಗಿದೆ. ಇದರಿಂದ ಜನಸಾಮಾನ್ಯರಿಗೆ ಅನುಕೂಲವಾಗಲಿದೆ ಎಂದು ಸಚಿವರಿಗೆ ಮನವರಿಕೆ ಮಾಡಿಕೊಟ್ಟರು. ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಚೇತನ್ ಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭ ರಾಜ್ಯ ಎಸ್ಸಿ–ಎಸ್ಟಿ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಉಪಸ್ಥಿತರಿದ್ದರು.