ಶಿವಮೊಗ್ಗ: ಸಹ್ಯಾದ್ರಿ ಕಾಲೇಜುಗಳಲ್ಲಿ ಸ್ನಾತಕೋತ್ತರ ಪ್ರವೇಶ ಪ್ರಕ್ರಿಯೆಯನ್ನು ಮರು ಆರಂಭಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಸಹ್ಯಾದ್ರಿ ಕಾಲೇಜುಗಳಲ್ಲಿ ಎಂ.ಎಸ್ಸಿ ಮತ್ತು ಎಂ.ಎ ಸ್ನಾತಕೋತ್ತರ ಕೋರ್ಸುಗಳ ಪ್ರವೇಶ ಪ್ರಕ್ರಿಯೆಯನ್ನು ನಿಲ್ಲಿಸಿರುವುದು ಸರಿಯಲ್ಲ. ಕೂಡಲೇ ಅದನ್ನು ಆರಂಭಿಸಬೇಕು ಎಂದು ಒತ್ತಾಯಿಸಿದರು. ಇದರೊಂದಿಗೆ ಡಿಜಿಟಲ್ ಮೌಲ್ಯಮಾಪನ ವ್ಯವಸ್ಥೆಯಲ್ಲಿರುವ ಲೋಪಗಳನ್ನು ಸರಿಪಡಿಸುವುದು, ಸಂಗ್ರಹವಾಗಿರುವ ಕ್ರೀಡಾ ಶುಲ್ಕವನ್ನು ಕ್ರೀಡಾ ಚಟುವಟಿಕೆಗಳಿಗೆ ಮಾತ್ರ ಬಳಸುವುದು, ನಗರ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸುವುದು, ಘಟಿಕೋತ್ಸವವನ್ನು ಕಾಲಕಾಲಕ್ಕೆ ನಡೆಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ವಿದ್ಯಾರ್ಥಿಗಳ ಈ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕು. ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಯಿತು. ಈ ಸಂದರ್ಭ ಎಬಿವಿಪಿ ಮಹಾನಗರ ಕಾರ್ಯದರ್ಶಿ ಹೆಚ್.ಎಸ್. ನಿರಂಜನ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.