ಶಿವಮೊಗ್ಗ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಹಿನ್ನೆಲೆ ಶಿವಮೊಗ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಜಮಾಯಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ಸಂಭ್ರಮ ವ್ಯಕ್ತಪಡಿಸಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಧರ್ಮೇಂದ್ರ ಪ್ರಧಾನ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು, ವಿದ್ಯಾರ್ಥಿಗಳ ಹೋರಾಟಕ್ಕೆ ಜೈಕಾರ ಹಾಕಿದರು.

ಕಚೇರಿ ಮುಂದೆ ಹೊಸ ಫ್ಲೆಕ್ಸ್
ಎರಡು ದಿನದ ಹಿಂದೆ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿದ್ದ ಬಿಜೆಪಿ ಕಾರ್ಯಕರ್ತರು ಅಲ್ಲಿದ್ದ ಫ್ಲೆಕ್ಸ್ ಕಿತ್ತೆಸೆದಿದ್ದರು. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಿನ್ನೆಲೆ ಅದೇ ಜಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೊಸ ಫ್ಲೆಕ್ಸ್ ಅಳವಡಿಸಿದರು. ಫ್ಲೆಕ್ಸ್ನಲ್ಲಿ ‘ಪ್ರಜಾಪ್ರಭುತ್ವಕ್ಕೆ ಸಂದ ಜಯ. ಸರ್ವಾಧಿಕಾರಿ ಧೋರಣೆ ತೊಲಗಲಿ, ಸಂವಿಧಾನ ಉಳಿಯಲಿ’ ಎಂದು ಬರೆಸಲಾಗಿದೆ.
ಸಂಭ್ರಮಾಚರಣೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್. ಪ್ರಸನ್ನ ಕುಮಾರ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ವಿಧಾನ ಪರಿಷತ್ ಸದಸ್ಯೆ ಬಲ್ಕಿಸ್ ಬಾನು ಸೇರಿದಂತೆ ಹಲವರು ಉಪಸ್ಥಿತರಿದ್ದರು.