ಶಿವಮೊಗ್ಗದಲ್ಲಿ ಜಂತು ಹುಳು ನಿವಾರಣಾ ಮಾತ್ರೆ ವಿತರಣೆ, ಯಾವ್ಯಾವ ವಯಸ್ಸಿನ ಮಕ್ಕಳು ಎಷ್ಟು ಮಾತ್ರೆ ತೆಗೆದುಕೊಳ್ಳಬೇಕು?

ಶಿವಮೊಗ್ಗ: ವಿದ್ಯಾಭ್ಯಾಸದಲ್ಲಿ ಏಕಾಗ್ರತೆ ಮತ್ತು ಉತ್ತಮ ಆರೋಗ್ಯಕ್ಕಾಗಿ 1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳು ಕಡ್ಡಾಯವಾಗಿ ಜಂತು ಹುಳು ನಿವಾರಣಾ ಮಾತ್ರೆಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಸ್.ನಟರಾಜ್ ತಿಳಿಸಿದರು.➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಮಿಳಘಟ್ಟ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ‘ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನ’ ಕಾರ್ಯಕ್ರಮವನ್ನು ಮಕ್ಕಳಿಗೆ ಮಾತ್ರೆ ನೀಡುವ ಮೂಲಕ ಅವರು ಉದ್ಘಾಟಿಸಿ ಮಾತನಾಡಿದರು.

National-Deworming-Day-program-held-at-Milaghatta

ಜಂತು ಹುಳುಗಳ ಸೋಂಕಿನಿಂದ ದೇಹವು ಪೋಷಕಾಂಶಗಳನ್ನು ಸರಿಯಾಗಿ ಬಳಸಿಕೊಳ್ಳಲು ಸಾಧ್ಯವಾಗದೇ ಮಕ್ಕಳಲ್ಲಿ ರಕ್ತಹೀನತೆ, ಅಪೌಷ್ಟಿಕತೆ ಹಾಗೂ ಕಲಿಕೆಯಲ್ಲಿ ಹಿಂದುಳಿಯುವಿಕೆ ಮುಂತಾದ ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ ಎಂದರು.

ಎಷ್ಟು ವರ್ಷದ ಮಕ್ಕಳಿಗೆ ಎಷ್ಟು ಮಾತ್ರೆ?

ಆರ್‌ಸಿಹೆಚ್‌ಓ ಡಾ.ಓ.ಮಲ್ಲಪ್ಪ ಮಾತನಾಡಿ, ಭಾರತದಲ್ಲಿ ಜಂತು ಹುಳು ನಿವಾರಣಾ ಮಾತ್ರೆಗಳನ್ನು ನಿರಂತರವಾಗಿ ನೀಡುತ್ತ ಬಂದಿರುವುದರಿಂದ ಸೋಂಕಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಆರೋಗ್ಯ ಇಲಾಖೆಯು 1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಆಲ್ಬೆಂಡಾಜೋಲ್ ಮಾತ್ರೆಗಳನ್ನು ಉಚಿತವಾಗಿ ವಿತರಿಸಲಿದೆ. 1 ರಿಂದ 2 ವರ್ಷದೊಳಗಿನ ಮಕ್ಕಳಿಗೆ ಅರ್ಧ (1/2) ಮಾತ್ರೆ. 2 ರಿಂದ 19 ವರ್ಷದೊಳಗಿನ ಮಕ್ಕಳಿಗೆ 1 ಸಂಪೂರ್ಣ ಮಾತ್ರೆ ನೀಡಬಹುದು. ಮಕ್ಕಳು ಜಗಿದು ಅಥವಾ ಚೀಪಿ ನುಂಗಬೇಕು ಎಂದರು.

ಎಷ್ಟು ಮಕ್ಕಳಿಗೆ ಮಾತ್ರೆ ವಿತರಣೆ?

2026-27ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 4,17,565 ಮಕ್ಕಳು ನೋಂದಣಿಯಾಗಿದ್ದು, ಅಂಗನವಾಡಿ ಕೇಂದ್ರಗಳು, ಶಾಲೆಗಳು ಹಾಗೂ ಕಾಲೇಜುಗಳಲ್ಲಿ ಮಾತ್ರೆಗಳನ್ನು ವಿತರಿಸಲಾಗುತ್ತಿದೆ. ಶಾಲೆ ಹಾಗೂ ಅಂಗನವಾಡಿಯಲ್ಲಿ ಬಿಟ್ಟುಹೋದವರಿಗೆ ಆಗಸ್ಟ್ 17ರಂದು ನಡೆಯುವ ಮೋಪ್-ಅಪ್ ರೌಂಡ್‌ನಲ್ಲಿ ಮಾತ್ರೆ ನೀಡಲಾಗುತ್ತದೆ. ಶಾಲೆಯಿಂದ ಹೊರಗುಳಿದ ಮಕ್ಕಳಿಗಾಗಿ ಆಶಾ ಕಾರ್ಯಕರ್ತೆಯರು ಮನೆ ಭೇಟಿ ನೀಡಿ ಮಾತ್ರೆ ವಿತರಿಸಲಿದ್ದಾರೆ.

ತಾಲ್ಲೂಕು ವೈದ್ಯಾಧಿಕಾರಿ ಡಾ.ಚಂದ್ರಶೇಖರ್ ಮಾತನಾಡಿ, ಜಂತು ಹುಳುಗಳಿಂದ ರಕ್ತಹೀನತೆ ಮತ್ತು ಆಯಾಸ ಉಂಟಾಗುವುದರಿಂದ ವರ್ಷದಲ್ಲಿ ಫೆಬ್ರವರಿ ಮತ್ತು ಆಗಸ್ಟ್‌ನಲ್ಲಿ ವರ್ಷಕ್ಕೆ ಎರಡು ಬಾರಿ ಈ ಮಾತ್ರೆ ತೆಗೆದುಕೊಳ್ಳುವುದರಿಂದ ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ಉತ್ತಮಗೊಳ್ಳುತ್ತದೆ ಎಂದರು.

ಮಿಳಘಟ್ಟ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಉಮಾಶಂಕರ್ ಹೆಚ್.ಎಸ್. ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಿಡಿಪಿಓ ಗಂಗೂಬಾಯಿ, ಡಾ.ಕಾಂಚನ, ಜಯಮ್ಮ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.