ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಆರೋಪಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಧರಣಿ ಸತ್ಯಾಗ್ರಹ ಆರಂಭಿಸಲಾಗಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.
ರಾತ್ರಿಯು ಮುಂದುವರೆದ ಧರಣಿ
ಬಿಜೆಪಿ ಜಿಲ್ಲಾ ಘಟಕದ ಪ್ರಮುಖರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರಾತ್ರಿಯು ಪ್ರತಿಭಟನೆ ಮುಂದುವರೆಸಿದರು. ಸಚಿವ ನಾಗೇಂದ್ರ, ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದರು.

ಜೈಲಿಗೆ ಹೋಗಿ ಬಂದವರ ಮರುನೇಮಕ
ಪ್ರತಿಭಟನೆ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾ ಅಧ್ಯಕ್ಷ ಎನ್.ಕೆ.ಜಗದೀಶ್, ಕಾಂಗ್ರೆಸ್ ಪಕ್ಷ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಜಗದೀಶ್ ಏನೆಲ್ಲ ಹೇಳಿದರು? ಇಲ್ಲಿದೆ ಪಾಯಿಂಟ್ಸ್

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಬಿ.ನಾಗೇಂದ್ರ ಅವರ ಮೌಖಿಕ ಆದೇಶದ ಮೇರೆಗೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ₹187 ಕೋಟಿ ಅವ್ಯವಹಾರ ನಡೆದಿದೆ. ಇದರಲ್ಲಿ ₹88 ಕೋಟಿಯನ್ನು ನಾಗೇಂದ್ರ ಅವರು ಸ್ವಂತಕ್ಕೆ ಬಳಸಿರುವ ಬಗ್ಗೆ ಗಂಭೀರ ಆರೋಪವಿದ್ದು, ತನಿಖೆಯಿಂದ ಸತ್ಯ ಹೊರಬರಬೇಕು.

ನಾಗೇಂದ್ರ ಅವರ ಮೌಖಿಕ ಆದೇಶದ ಮೇಲೆ ಅಧಿಕಾರಿಗಳು ಒತ್ತಾಯಪೂರ್ವಕವಾಗಿ ಬೇರೆ ಬೇರೆ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಆ ನಿಗಮದ ಅಧಿಕಾರಿ ಚಂದ್ರಶೇಖರ್ ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೆ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದರು. ಆದರೆ, ಈಗ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ. ನ್ಯಾಯಾಲಯ ಹಾಗೂ ಇ.ಡಿ.ಯಲ್ಲಿ ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದರೂ ಕಳಂಕಿತರಿಗೆ ಸಚಿವ ಸ್ಥಾನ ನೀಡಿರುವುದು ಸರಿಯಲ್ಲ.

ಸಚಿವ ಸ್ಥಾನ ನೀಡದಿದ್ದರೆ ಹಗರಣದ ವಿವರ ಬಹಿರಂಗಪಡಿಸುವುದಾಗಿ ನಾಗೇಂದ್ರ ಹೈಕಮಾಂಡ್‌ಗೆ ಬ್ಲಾಕ್‌ಮೇಲ್ ಮಾಡಿದ್ದಾರೆ. ಅದಕ್ಕೆ ಹೆದರಿಯೇ ಮಂತ್ರಿ ಸ್ಥಾನ ನೀಡಲಾಗಿದೆ. ಆದರೆ ಮೃತ ಅಧಿಕಾರಿ ಚಂದ್ರಶೇಖರ್ ಅವರ ಕುಟುಂಬಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ.
ಪ್ರತಿಭಟನೆಯಲ್ಲಿ ವಿಧಾನಪರಿಷತ್ ಮಾಜಿ ಸದಸ್ಯ ಆರ್.ಕೆ. ಸಿದ್ಧರಾಮಣ್ಣ, ಎಸ್.ದತ್ರಾತ್ರಿ, ಹರಿಕೃಷ್ಣ, ಮೋಹನ್ ರೆಡ್ಡಿ, ಜ್ಯೋತಿಪ್ರಕಾಶ್, ಮಾಲತೇಶ್, ಗಣೇಶ್ ಬಿಳಕಿ, ವಿನ್ಸೆಂಟ್ ರೋಡ್ರಿಗಸ್, ಹರೀಶ್, ಸಂತೋಷ್, ರಶ್ಮಿ ಶ್ರೀನಿವಾಸ್, ಸುರೇಖಾ ಮುರಳೀಧರ, ಚಂದ್ರಶೇಖರ್, ಮಂಜುನಾಥ್ ಹಾಗೂ ಶ್ರೀನಾಗ್ ಪಾಲ್ಗೊಂಡಿದ್ದರು.