ಶಿವಮೊಗ್ಗ: ಡಿಜಿಟಲ್ ಅರೆಸ್ಟ್ ಬೆದರಿಕೆಗಳು ಪುನಃ ಆರಂಭವಾಗಿದ್ದು, ಶಿವಮೊಗ್ಗದಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಮುಂಬೈ ಕ್ರೈಂ ಬ್ರಾಂಚ್ ಪೊಲೀಸ್ ಅಧಿಕಾರಿಗಳೆಂದು ನಟಿಸಿ ಡಿಜಿಟಲ್ ಅರೆಸ್ಟ್ ಮಾಡುವುದಾಗಿ ಬೆದರಿಸಿದ ವಂಚಕರು, ಮಹಿಳೆಯೊಬ್ಬರಿಂದ ₹21 ಲಕ್ಷ ದೋಚಿದ್ದಾರೆ.
ಸೆಪ್ಟೆಂಬರ್ 15 ರಂದು ಬೆಳಿಗ್ಗೆ 9:30ಕ್ಕೆ ನಿವೃತ್ತ ಉದ್ಯೋಗಿ ಮಹಿಳೆಯ ಮೊಬೈಲ್‌ಗೆ ಕರೆ ಮಾಡಿದ ವ್ಯಕ್ತಿ ತಾನು ಮುಂಬೈ ಕ್ರೈಂ ಬ್ರಾಂಚ್ ಪೊಲೀಸ್ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದಾನೆ. ನಿಮ್ಮ ಹೆಸರಿನಲ್ಲಿ ಮುಂಬೈ ಕೆನರಾ ಬ್ಯಾಂಕ್‌ನಲ್ಲಿ ಬ್ಯಾಂಕ್ ಖಾತೆ ತೆರೆದು, ಅದರಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂದು ಬೆದರಿಸಿದ್ದಾನೆ. ಈ ಸಂಬಂಧ ನಿಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದ್ದು, ತಕ್ಷಣ ಅರೆಸ್ಟ್ ಮಾಡಲಾಗುವುದು ಎಂದು ಆತಂಕ ಮೂಡಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಬಂಧನದಿಂದ ಪಾರಾಗಬೇಕಾದರೆ ತಕ್ಷಣ ಹಣ ವರ್ಗಾಯಿಸಬೇಕು ಎಂದು ನಂಬಿಸಿದ್ದಾನೆ. ಇದರಿಂದ ಆತಂಕಗೊಂಡ ಮಹಿಳೆ, ತಮ್ಮ ಬ್ಯಾಂಕ್ ಖಾತೆಯಲ್ಲಿದ್ದ ₹21 ಲಕ್ಷ ಹಣವನ್ನು ಆರ್‌ಟಿಜಿಎಸ್ ಮೂಲಕ ವಂಚಕರು ನೀಡಿದ ಖಾತೆಗೆ ವರ್ಗಾಯಿಸಿದ್ದಾರೆ. ಹಣ ವರ್ಗಾವಣೆಯಾದ ನಂತರ ತಾನು ಮೋಸ ಹೋಗಿರುವುದು ಮಹಿಳೆಗೆ ಅರಿವಾಗಿದೆ. ಮಹಿಳೆ ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.