ಮಾಜಿ ಸಚಿವ ಕಾಗೋಡು ತಿಮ್ಮಪ್ಪಗೆ ಸಿಎಂ ವಿಡಿಯೋ ಕಾಲ್‌

ಸಾಗರ: ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾದ ಬೆನ್ನಿಗೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿಡಿಯೋ ಕಾಲ್‌ ಮಾಡಿ ಆಶೀರ್ವಾದ ಪಡೆದರು. (ಈ ಸುದ್ದಿಯನ್ನು ಇನ್ನು 96 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಕಾಗೋಡು ಮನೆಗೆ ಮಿನಿಸ್ಟರ್ ಭೇಟಿ

ಮಾಜಿ ಸಚಿವ ಹಾಗೂ ವಿಧಾನಸಭೆಯ ಮಾಜಿ ಸ್ಪೀಕರ್ ಡಾ. ಕಾಗೋಡು ತಿಮ್ಮಪ್ಪ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿರುವ ಹಿನ್ನೆಲೆ, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಇಂದು ಕಾಗೋಡು ತಿಮ್ಮಪ್ಪ ಅವರ ಸಾಗರದ ನಿವಾಸಕ್ಕೆ ತೆರಳಿ ಅಭಿನಂದಿಸಿದರು.

CM-DK-Shivakumar-Video-call-for-Former-Minister-Kagodu-Thimmappa

ಈ ಸಂದರ್ಭದಲ್ಲಿ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಚಿವ ಮಧು ಬಂಗಾರಪ್ಪ ಅವರು ವಿಡಿಯೋ ಕರೆ ಮಾಡಿ, ಕಾಗೋಡು ತಿಮ್ಮಪ್ಪ ಅವರೊಂದಿಗೆ ಮಾತನಾಡಿಸಿದರು. ಹಿರಿಯ ನಾಯಕನಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದಕ್ಕೆ ಮುಖ್ಯಮಂತ್ರಿ ಶುಭಾಶಯ ತಿಳಿಸಿ, ರಾಜಕೀಯ ಕ್ಷೇತ್ರದಲ್ಲಿ ಕಾಗೋಡು ತಿಮ್ಮಪ್ಪ ಅವರ ಸೇವೆ ಅನುಕರಣೀಯವಾಗಿದೆ. ಭಗವಂತ ನಿಮಗೆ ಉತ್ತಮ ಆರೋಗ್ಯ ನೀಡಲಿ. ನಿಮ್ಮ ಆಶೀರ್ವಾದ ನಮ್ಮೆಲ್ಲರ ಮೇಲಿರಲಿ ಎಂದು ಹಾರೈಸಿದರು.

ಹೆಲಿಕಾಪ್ಟರ್‌ ಕಳುಹಿಸಲಾ?

ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಲು ಬೆಂಗಳೂರಿಗೆ ಆಗಮಿಸುವುದು ಕಷ್ಟವಾಗಬಹುದೆಂಬ ಹಿನ್ನೆಲೆ, ಹೆಲಿಕಾಪ್ಟರ್ ವ್ಯವಸ್ಥೆ ಮಾಡಬೇಕೇ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿಚಾರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಾಗೋಡು ತಿಮ್ಮಪ್ಪ ಅವರು, “ಬೇಡ, ನಾನು ಹೇಗೋ ಬರುವೆ” ಎಂದು ತಮ್ಮ ಸರಳತೆ ಮೆರೆದರು.

ಮನೆಗೆ ತೆರಳಿ ಪ್ರಶಸ್ತಿ ಪ್ರದಾನ

ವಯೋಸಹಜ ಅನಾರೋಗ್ಯದ ಹಿನ್ನೆಲೆ ಕಾಗೋಡು ತಿಮ್ಮಪ್ಪ ಅವರು ಸದ್ಯ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಹೀಗಾಗಿ ಬೆಂಗಳೂರಿಗೆ ತೆರಳಿ ಪ್ರಶಸ್ತಿ ಸ್ವೀಕರಿಸಲು ಅವರಿಗೆ ತೊಂದರೆಯಾಗಬಹುದು. ಈ ಹಿನ್ನೆಲೆ ಸರ್ಕಾರವೇ ಅವರ ಮನೆಗೆ ತೆರಳಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಈ ಸಂದರ್ಭದಲ್ಲಿ ಕಾಗೋಡು ತಿಮ್ಮಪ್ಪ ಅವರು ಸಚಿವ ಮಧು ಬಂಗಾರಪ್ಪ ಅವರ ಕೈಗೆ ಮುತ್ತಿಟ್ಟು ಪ್ರೀತಿಯಿಂದ ಮಾತನಾಡಿ, “ಸಣ್ಣ ವಯಸ್ಸಿನಲ್ಲೇ ಸಚಿವರಾಗಿದ್ದೀರಿ. ಒಳ್ಳೆಯ ಕೆಲಸ ಮಾಡಿ, ರಾಜಕೀಯದಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಿರಿ” ಎಂದು ಹಾರೈಸಿದರು. ಹಿರಿಯ ನಾಯಕನ ಈ ಪ್ರೀತಿ ಮತ್ತು ಆಶೀರ್ವಾದದ ಕ್ಷಣ ಎಲ್ಲರ ಗಮನ ಸೆಳೆಯಿತು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಕಾಗೋಡು ತಿಮ್ಮಪ್ಪರೊಂದಿಗೆ ಮಾತನಾಡುವ ಸಂದರ್ಭದಲ್ಲಿ ಸಚಿವ ಮಧು ಬಂಗಾರಪ್ಪ ಅವರು, “ಶರಾವತಿ ಸಂತ್ರಸ್ತರಿಗೆ ಭೂಹಕ್ಕು ನೀಡುವ ಸಂಬಂಧ ಸಮಗ್ರವಾಗಿ ಪರಿಶೀಲನೆ ನಡೆಸಿ ಪ್ರಸ್ತಾವನೆ ಸಿದ್ಧಪಡಿಸಿದ್ದೇವೆ. ಸದ್ಯವೇ ಇದಕ್ಕೆ ಸಚಿವ ಸಂಪುಟದ ಒಪ್ಪಿಗೆ ಪಡೆದು, ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡುತ್ತೇವೆ. ಶೀಘ್ರದಲ್ಲೇ ಅವರಿಗೆಲ್ಲ ಹಕ್ಕು ಪತ್ರ ದೊರೆಯುವಂತೆ ಮಾಡಿ, ನಿಮ್ಮ ಬಹುದಿನಗಳ ಕನಸು ಈಡೇರುವಂತೆ ಮಾಡುತ್ತೇವೆ” ಎಂದು ತಿಳಿಸಿದರು.

Editor JOIN OUR WHATSAPP GROUP