ಶಿವಮೊಗ್ಗ: ನಗರದ ಬಿ.ಎಚ್. ರಸ್ತೆಯಲ್ಲಿರುವ ತುಂಗಾ ಸೇತುವೆಯ ಮರು ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ₹40 ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ ನೀಡಲಾಗಿದೆ. ಈ ಬೆಳವಣಿಗೆ ಬೆನ್ನಿಗೆ ಸರ್ಕಾರಕ್ಕೆ ಶಾಸಕ ಚನ್ನಬಸಪ್ಪ ಅಭಿನಂದನೆ ಸಲ್ಲಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 54 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಸತತ ಪ್ರಯತ್ನಕ್ಕೆ ಸಂದ ಜಯ
ತುಂಗಾ ನದಿಗೆ ನೂತನ ಸೇತುವೆ ನಿರ್ಮಾಣ ಕಾಮಗಾರಿಗೆ ಸರ್ಕಾರದಿಂದ ಆಡಳಿತಾತ್ಮಕ ಹಾಗೂ ಹಣಕಾಸಿನ ಅನುಮೋದನೆ ದೊರೆತಿರುವುದು ಅತ್ಯಂತ ಸಂತಸದ ವಿಷಯ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದ್ದಾರೆ. ಅಲ್ಲದೆ ತಮ್ಮ ಮನವಿಗೆ ಸ್ಪಂದಿಸಿದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಶತಮಾನದ ಸೇತುವೆ
ಶಿವಮೊಗ್ಗ ನಗರದ ಹೃದಯಭಾಗದಲ್ಲಿರುವ ತುಂಗಾ ನದಿಯ ಹಳೆಯ ಸೇತುವೆ ನಿರ್ಮಾಣವಾಗಿ ಶತಮಾನ ಕಳೆದಿದೆ. ನಗರ ಬೆಳೆದಂತೆ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿವೆ. ಸಾರ್ವಜನಿಕರ ಸುರಕ್ಷತೆ ಹಾಗೂ ಭವಿಷ್ಯದ ಅಗತ್ಯತೆ ದೃಷ್ಟಿಯಿಂದ ಹೊಸ ಸೇತುವೆ ನಿರ್ಮಾಣ ಅನಿವಾರ್ಯವಾಗಿದೆ. ಲೋಕೋಪಯೋಗಿ ಇಲಾಖೆಯ ಉನ್ನತ ಮಟ್ಟದಲ್ಲಿ ನಿರಂತರವಾಗಿ ಚರ್ಚಿಸಿ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ಶೀಘ್ರ ಟೆಂಡರ್, ಕಾಲಮಿತಿಯೊಳಗೆ ಕಾಮಗಾರಿ
ನಿರಂತರ ಪ್ರಯತ್ನದ ಫಲವಾಗಿ ಇದೀಗ ಆಡಳಿತಾತ್ಮಕ ಮತ್ತು ಆರ್ಥಿಕ ಇಲಾಖೆಯಿಂದ ಅಧಿಕೃತ ಅನುಮೋದನೆ ಸಿಕ್ಕಿದೆ. ಟೆಂಡರ್ ಪ್ರಕ್ರಿಯೆ ಸೇರಿದಂತೆ ತಾಂತ್ರಿಕ ಪ್ರಕ್ರಿಯೆಗಳನ್ನು ಶೀಘ್ರ ಪೂರ್ಣಗೊಳಿಸಿ, ನಿಗದಿತ ಕಾಲಮಿತಿಯೊಳಗೆ ಸೇತುವೆ ನಿರ್ಮಾಣ ಪೂರ್ಣಗೊಳಿಸಿ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಲಾಗುವುದು ಎಂದು ಶಾಸಕ ಚನ್ನಬಸಪ್ಪ ತಿಳಿಸಿದ್ದಾರೆ.