ಶಿವಮೊಗ್ಗ: ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಬಿ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯು ನವೆಂಬರ್ 15 ರಂದು ನಡೆಯಲಿದೆ. ಇದಕ್ಕಾಗಿ ಶಿವಮೊಗ್ಗ ನಗರದ 24 ಕೇಂದ್ರಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಾಶ ಜಿ.ಟಿ. ನಿಟ್ಟಳಿ ತಿಳಿಸಿದರು. (ಈ ಸುದ್ದಿಯನ್ನು ಇನ್ನು 48 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷೆಗೆ ಒಟ್ಟು 8,466 ಅಭ್ಯರ್ಥಿಗಳು ಹಾಜರಾಗಲಿದ್ದಾರೆ. ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಪ್ರತಿ ಕೊಠಡಿಯಲ್ಲೂ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ವೆಬ್ಕಾಸ್ಟಿಂಗ್ ನಡೆಸಲಾಗುವುದು ಎಂದರು.

200 ವ್ಯಾಪ್ತಿಯಲ್ಲಿ ನಿಷೇಧಾಜ್ಞೆ
ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ದಿನಪೂರ್ತಿ ಸುತ್ತಮುತ್ತಲಿನ ಕಂಪ್ಯೂಟರ್ ಹಾಗೂ ಝೆರಾಕ್ಸ್ ಕೇಂದ್ರಗಳನ್ನು ಮುಚ್ಚಲು ಆದೇಶಿಸಲಾಗಿದೆ. ಮೊಬೈಲ್ ಫೋನ್ ಸೇರಿ ಎಲೆಕ್ಟ್ರಾನಿಕ್ ಸಾಧನಗಳ ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ ಎಂದು ವಿವರಿಸಿದರು.
80 ಅಭ್ಯರ್ಥಿಗೆ ಒಬ್ಬ ಪೊಲೀಸ್
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಮಾತನಾಡಿ, ಭದ್ರತೆಗಾಗಿ ಪ್ರತಿ 80 ಅಭ್ಯರ್ಥಿಗಳಿಗೆ ಒಬ್ಬರಂತೆ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಇದರಲ್ಲಿ ಶೇ.50 ರಷ್ಟು ಮಹಿಳಾ ಸಿಬ್ಬಂದಿ ಇರಲಿದ್ದಾರೆ ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ರಿಷಿ ಆನಂದ್, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಪ್ಪ ಗುಂಡಪಲ್ಲಿ ಉಪಸ್ಥಿತರಿದ್ದರು.