ಶಿವಮೊಗ್ಗ: ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಬಿಜೆಪಿ ಸ್ವತಂತ್ರವಾಗಿ ಸ್ಪರ್ಧಿಸಲು ತೀರ್ಮಾನಿಸಿದೆ ಎಂದು ಮಾಜಿ ಶಾಸಕ ಕೆ.ಬಿ. ಅಶೋಕ್ ನಾಯ್ಕ್ ಹೇಳಿದರು. (ಈ ಸುದ್ದಿಯನ್ನು ಇನ್ನು 55 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮಟ್ಟದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಾಗಿದೆ. ಆದರೆ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವ ಕುರಿತು ಪಕ್ಷದ ಹಂತದಲ್ಲಿ ಯೋಚಿಸಲಾಗಿದೆ. ಪ್ರತ್ಯೇಕವಾಗಿ ಸ್ಪರ್ಧಿಸಲು ಬಿಜೆಪಿ ಶಕ್ತವಾಗಿದೆ ಎಂದರು.

ಫ್ರೆಂಡ್ಲಿ ಫೈಟ್ ಆಲೋಚನೆ
ಸ್ಥಳೀಯ ಚುನಾವಣೆಗಳಲ್ಲಿ ಫ್ರೆಂಡ್ಲಿ ಫೈಟ್ ನಡೆಸುವ ಆಲೋಚನೆಯೂ ಇದೆ. ಜೆಡಿಎಸ್ ಕೂಡ ಸ್ಪರ್ಧಿಸಲಿ, ಬಿಜೆಪಿಯೂ ಸ್ಪರ್ಧಿಸಲಿ. ಚುನಾವಣೆ ನಂತರ ಎರಡೂ ಪಕ್ಷಗಳು ಒಟ್ಟಾಗಿ ಹೋಗುವ ಅವಕಾಶವಿದೆ ಎಂದು ತಿಳಿಸಿದರು.
ರಾಜ್ಯ ಹಾಗೂ ಕೇಂದ್ರ ನಾಯಕರ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆ. ಪಕ್ಷಕ್ಕೆ ಗರಿಷ್ಠ ಸ್ಥಾನಗಳನ್ನು ಗೆಲ್ಲಿಸುವುದೇ ನಮ್ಮ ಪ್ರಮುಖ ಗುರಿಯಾಗಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ 6 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಪೈಕಿ 4 ರಿಂದ 5 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ಸ್ಪಷ್ಟ ವಾತಾವರಣವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅಲ್ಲದೆ, ಪಕ್ಷದ ಕಾರ್ಯಕರ್ತರು ತಮ್ಮನ್ನು ಮುಂದಿನ ಶಾಸಕ ಎಂದು ಪ್ರಚಾರ ನಡೆಸುತ್ತಿರುವುದು ಅವರ ಪ್ರೀತಿ ಹಾಗೂ ಅಭಿಮಾನವಾಗಿದೆ ಎಂದು ಅಶೋಕ್ ನಾಯ್ಕ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಎನ್.ಕೆ.ಜಗದೀಶ್, ಹರೀಶ್, ದೊಡ್ಡಪ್ಪ, ಸುನಿಲ್, ಮಂಜುನಾಥ್, ಚಂದ್ರಶೇಖರ್ ಉಪಸ್ಥಿತರಿದ್ದರು.