ಶಿವಮೊಗ್ಗ: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕುರಿತು ವರಿಷ್ಠರು ಕೈಗೊಳ್ಳುವ ತೀರ್ಮಾನಕ್ಕೆ ಬದ್ಧವಾಗಿರುವುದಾಗಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕಿ ಶಾರದಾ ಪೂರ್ಯಾನಾಯ್ಕ್ ತಿಳಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 45 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂಬ ಮಾಜಿ ಶಾಸಕ ಕೆ.ಬಿ. ಅಶೋಕ್ ನಾಯ್ಕ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಪತ್ರಿಕೆಗಳ ಮೂಲಕ ತಮಗೆ ಮಾಹಿತಿ ತಿಳಿಯಿತು ಎಂದರು.

ಬಿಜೆಪಿ ಜಿಲ್ಲಾ ಅಧ್ಯಕ್ಷ ಜಗದೀಶ್ ಅವರ ಸಮ್ಮುಖದಲ್ಲೇ ಮಾಜಿ ಶಾಸಕರು ಈ ಹೇಳಿಕೆ ನೀಡಿರುವುದು ಗಮನಕ್ಕೆ ಬಂದಿದೆ. ಇಂತಹ ಹೇಳಿಕೆಗಳಿಂದ ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಯಾಗಲಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯು ಶಿವಮೊಗ್ಗ ಜಿಲ್ಲಾ ಮಟ್ಟದಲ್ಲಿ ಆಗಿರುವ ತೀರ್ಮಾನವಲ್ಲ. ಇದು ದೇಶದ ಮಟ್ಟದಲ್ಲಿ ಹಾಗೂ ರಾಜ್ಯ ನಾಯಕರು ಕೈಗೊಂಡಿರುವ ತೀರ್ಮಾನವಾಗಿದೆ ಎಂದು ಸ್ಪಷ್ಟಪಡಿಸಿದರು.
ವರಿಷ್ಠರು ಒಟ್ಟಾಗಿ ಸ್ಪರ್ಧಿಸಲು ಸೂಚಿಸಿದರೆ ಒಟ್ಟಾಗಿ ಸ್ಪರ್ಧಿಸುತ್ತೇವೆ. ಪ್ರತ್ಯೇಕವಾಗಿ ಸ್ಪರ್ಧಿಸಲು ಅಥವಾ ‘ಫ್ರೆಂಡ್ಲಿ ಫೈಟ್’ ನಡೆಸಲು ತಿಳಿಸಿದರೆ ಅದಕ್ಕೂ ಜೆಡಿಎಸ್ ಸಿದ್ಧವಿದೆ ಎಂದು ಶಾರದಾ ಪೂರ್ಯಾನಾಯ್ಕ್ ತಿಳಿಸಿದರು.