ಶಿವಮೊಗ್ಗ: ಹೆಚ್ಚಿನ ವರದಕ್ಷಿಣೆಗಾಗಿ ಪತ್ನಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿ, ಕೊಲೆ ಬೆದರಿಕೆಯೊಡ್ಡಿದ್ದ ಪತಿಗೆ ನಗರದ 2ನೇ ಜೆಎಂಎಫ್ಸಿ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ಹಾಗೂ ₹14,000 ದಂಡ ವಿಧಿಸಿ ತೀರ್ಪು ನೀಡಿದೆ. (ಈ ಸುದ್ದಿಯನ್ನು ಇನ್ನು 40 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಟಿಪ್ಪುನಗರ ನಿವಾಸಿ ಮಹಮ್ಮದ್ ಇರ್ಷಾದ್ ಶಿಕ್ಷೆಗೊಳಗಾದ ವ್ಯಕ್ತಿ. ಈತ ತನ್ನ ಪತ್ನಿ ಅಸ್ಮಾ ಫರ್ಹಿನ್ ಅವರಿಗೆ ಹೆಚ್ಚಿನ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದನು. ಈ ಸಂಬಂಧ 2023ರಲ್ಲಿ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿತ್ತು.

ಇನ್ಸ್ಪೆಕ್ಟರ್ ಭರತ್ ಕುಮಾರ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಿದ್ಧರಾಜು ಎನ್.ಕೆ. ಅವರು ನವೆಂಬರ್ 24 ರಂದು ಐಪಿಸಿಯ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿ ಒಟ್ಟು 3 ವರ್ಷಗಳ ಸಾಧಾರಣ ಸಜೆ ಹಾಗೂ ₹14,000 ದಂಡ ವಿಧಿಸಿದ್ದಾರೆ. ಪ್ರಕರಣದ ಉಳಿದ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಜಿ.ಕೆ. ಕಿರಣ್ಕುಮಾರ್ ವಾದ ಮಂಡಿಸಿದ್ದರು.