ಶಿವಮೊಗ್ಗ ಲೈವ್.ಕಾಂ | SHIMOGA NEWS | 28 JANUARY 2021
ಸಂಚಾರ ದಟ್ಟಣೆ ತಗ್ಗಿಸುವ ಉದ್ದೇಶದಿಂದ ಶಿವಮೊಗ್ಗ ನಗರ ಮತ್ತು ಭದ್ರಾವತಿಯಲ್ಲಿ ರೈಲ್ವೇ ಮೇಲ್ಸೇತುವೆ ಮತ್ತು ಕೆಳಸೇತುವೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಈಗಾಗಲೇ ಅನುದಾನ ಬಿಡುಗಡೆಗೊಳಿಸಿದೆ. ಆದಷ್ಟು ಬೇಗನೆ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು.
![]() |
ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಕುರಿತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಶಿವಮೊಗ್ಗ ನಗರದ ಸವಳಂಗ ರಸ್ತೆ, ಕಾಶಿಪುರ ಹಾಗೂ ಭದ್ರಾವತಿಯಲ್ಲಿ ಒಟ್ಟು 4 ರೈಲ್ವೇ ಸೇತುವೆಗಳ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ.
ಸವಳಂಗ ರಸ್ತೆಯಲ್ಲಿ ರೈಲ್ವೇ ಮೇಲ್ಸೇತುವೆ ಮತ್ತು ಕೆಳಸೇತುವೆ ನಿರ್ಮಾಣಕ್ಕೆ ಸರ್ಕಾರ 60.76 ಕೋಟಿ ರೂ. ಬಿಡುಗಡೆ ಮಾಡಿದೆ.
ಇಲ್ಲಿ ಭೂಸ್ವಾಧೀನ ಪ್ರಕ್ರಿಯೆ, ವಿದ್ಯುತ್ ಕಂಬಗಳ ಸ್ಥಳಾಂತರ ಇತ್ಯಾದಿ ಕಾರ್ಯಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು.
ಕಾಶಿಪುರ ರೈಲ್ವೇ ಕ್ರಾಸಿಂಗ್ ಬಳಿ ಮೇಲ್ಸೇತುವೆ ನಿರ್ಮಾಣಕ್ಕೆ 30ಕೋಟಿ ರೂ. ಬಿಡುಗಡೆ ಮಾಡಲಾಗಿದೆ.
ಭದ್ರಾವತಿಯಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ 49ಕೋಟಿ ರೂ. ಬಿಡುಗಡೆಯಾಗಿದೆ ಎಂದು ರಾಘವೇಂದ್ರ ತಿಳಿಸಿದರು.
ಪರ್ಯಾಯ ರಸ್ತೆ
ಮಾರ್ಚ್ ಒಂದರಂದು ಎಲ್ಲಾ ಕಾಮಗಾರಿಗಳನ್ನು ಆರಂಭಿಸಲು ಪೂರ್ವ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು. ಎಲ್ಲಾ ರೈಲ್ವೇ ಸೇತುವೆಗಳ ನಿರ್ಮಾಣ ಕಾರ್ಯವನ್ನು ದಾಖಲೆ ಸಮಯದ ಒಳಗಾಗಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ಕಾಮಗಾರಿ ಅವಧಿಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಗುರುತಿಸಲಾಗುತ್ತಿದೆ. ಸಾರ್ವಜನಿಕರಿಗೆ ಹೆಚ್ಚಿನ ಅನಾನುಕೂಲತೆಗಳು ಆಗದಂತೆ ಸೂಕ್ತ ಪರ್ಯಾಯ ರಸ್ತೆಗಳನ್ನು ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಶಿಕಾರಿಪುರ – ರಾಣೆಬೆನ್ನೂರು ಮಾರ್ಗಕ್ಕೆ ಭೂಸ್ವಾಧೀನ
ಜಿಲ್ಲೆಯಲ್ಲಿ ರೈಲ್ವೇ ಕೋಚಿಂಗ್ ಡಿಪೋ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಈಗಾಗಲೇ 60 ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಿದೆ. ಶಿಕಾರಿಪುರ – ರಾಣೆಬೆನ್ನೂರು ರೈಲ್ವೇ ಹಳಿ ನಿರ್ಮಾಣ ಕಾಮಗಾರಿಯ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದ್ದು, ಪ್ರಥಮ ಹಂತದ ಕಾಮಗಾರಿಗಳಿಗೆ ಟೆಂಡರ್ ಕರೆಯುವ ಪ್ರಕ್ರಿಯೆ ಹಂತದಲ್ಲಿದೆ. ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಭೂಸ್ವಾಧೀನ ಪ್ರಕ್ರಿಯೆ ಮತ್ತು ಕಾಮಗಾರಿಗಳ ಅನುಷ್ಟಾನಗೊಳಿಸಲಾಗುತ್ತಿದೆ. ರಾಜ್ಯ ಸರ್ಕಾರ ತನ್ನ ಪಾಲಿನ ಅನುದಾನವನ್ನು ಈಗಾಗಲೇ ಬಿಡುಗಡೆ ಮಾಡಿದೆ. ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಐತಿಹಾಸಿಕ ಬದಲಾವಣೆಗಳನ್ನು ಕಾಣಬಹುದಾಗಿದೆ ಎಂದು ಅವರು ಹೇಳಿದರು.
ಕೇಂದ್ರ ರೈಲ್ವೇ ಸಚಿವರ ಆಗಮನ
ಜಿಲ್ಲೆಯಲ್ಲಿ ನಡೆಯುತ್ತಿರುವ ರೈಲ್ವೇ ಯೋಜನೆಗಳಿಗೆ ಚಾಲನೆ ನೀಡಲು ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರು ಮಾರ್ಚ್ ಮೊದಲ ವಾರದಲ್ಲಿ ಶಿವಮೊಗ್ಗಕ್ಕೆ ಆಗಮಿಸುವ ಸಾಧ್ಯತೆಯಿದೆ. ಸಚಿವರು ಆ ಸಂದರ್ಭದಲ್ಲಿ ರೈಲ್ವೇ ಕಾಮಗಾರಿಗಳ ಭೂಮಿಪೂಜೆ ಮತ್ತು ಉದ್ಘಾಟನೆ ಕಾರ್ಯಗಳನ್ನು ನೆರವೇರಿಸಲಿದ್ದಾರೆ ಎಂದು ಅವರು ತಿಳಿಸಿದರು.
VIDEO REPORT
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಮಹಾನಗರ ಪಾಲಿಕೆ ಮೇಯರ್ ಸುವರ್ಣಾ ಶಂಕರ್, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್, ಆಯುಕ್ತ ಚಿದಾನಂದ ವಟಾರೆ, ರೈಲ್ವೇ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200