ಶಿವಮೊಗ್ಗ ಲೈವ್.ಕಾಂ | SHIMOGA | 8 ನವೆಂಬರ್ 2019
ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ಶಿವಮೊಗ್ಗದಲ್ಲಿ ಇವತ್ತು ಭಾರಿ ಪ್ರತಿಭಟನೆ ನಡೆಸಲಾಯಿತು. ಗೋಪಿ ಸರ್ಕಲ್ನಲ್ಲಿ ಮಾನವ ಸರಪಳಿ ನಿರ್ಮಿಸಿ ವೈದ್ಯಕೀಯ ವಿದ್ಯಾರ್ಥಿಗಳು ಹೋರಾಟ ನಡೆಸಿದರು.

ಐಎಂಎ ಸಭಾಂಗಣದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿತು. ಶಿವಮೊಗ್ಗದ ವಿವಿಧ ಆಸ್ಪತ್ರೆಗಳ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು, ಆಸ್ಪತ್ರೆಗಳ ಸಿಬ್ಬಂದಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ವೈದ್ಯರ ಪ್ರತಿಭಟನೆಗೆ ಕಾರಣವೇನು?
ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿಯರ ಮೇಲೆ ಕನ್ನಡಪರ ಸಂಘಟನೆ ಕಾರ್ಯಕರ್ತರು ಹಲ್ಲೆ ನಡೆಸಿದ್ದರು. ಹಲ್ಲೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ರಾಜ್ಯಾದ್ಯಂತ ಇವತ್ತು ಒಪಿಡಿ ಬಂದ್ ಮಾಡಲು ನಿರ್ಧರಿಸಲಾಗಿತ್ತು.
ವೈದ್ಯರ ಡಿಮಾಂಡ್ ಏನು?
ಕರ್ತವ್ಯನಿರತ ವೈದ್ಯರಿಗೆ ರಕ್ಷಣೆ ನೀಡಬೇಕು. ವೈದ್ಯರ ಮೇಲೆ ದೌರ್ಜನ್ಯ ಎಸಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ಕಠಿಣ ಕಾನೂನು ರೂಪಿಸಬೆರಕು ಎಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು
ಶಿವಮೊಗ್ಗದಲ್ಲಿ ಪ್ರತಿಭಟನೆ ಜೋರು

ಜಿಲ್ಲೆಯಲ್ಲಿ 668 ಖಾಸಗಿ ಆಸ್ಪತ್ರೆಗಳಿದ್ದು, ಎಲ್ಲ ಆಸ್ಪತ್ರೆಗಳ ಒಪಿಡಿ ಸೇವೆ 12 ತಾಸು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.
ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ
ಜಿಲ್ಲೆಯ 120 ಸರ್ಕಾರಿ ಆಸ್ಪತ್ರೆಗಳು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿವೆ. ಮತ್ತೊಂದೆಡೆ ಖಾಸಗಿ ಆಸ್ಪತ್ರೆಗಳಲ್ಲಿ ಅಪಘಾತ ಸೇರಿ ತುರ್ತು ಸೇವೆ ಮುಂದುವರಿಯಲಿದೆ. ಒಳರೋಗಿಗಳಿಗೆ ಯಥಾ ಪ್ರಕಾರ ಚಿಕಿತ್ಸೆ ದೊರೆಯುತ್ತಿವೆ. ಮೆಡಿಕಲ್ ಶಾಪ್ಗಳ ಸೇವೆಯಲ್ಲೂ ಯಾವುದೇ ವ್ಯತ್ಯಾಸವಿಲ್ಲ. ಜತೆಗೆ 108 ಸೇರಿ ಖಾಸಗಿ ಆಸ್ಪತ್ರೆಗಳ ಆಂಬುಲೆನ್ಸ್ಗಳು ಕೂಡ ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ.