SHIVAMOGGA LIVE NEWS | 21 SEPTEMBER 2023
SHIMOGA : ಜಿಲ್ಲೆಯ ಜನರ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರ ಒದಗಿಸುವಂತೆ ರಾಜ್ಯ ಸರ್ಕಾರ (Government) ಸೂಚನೆ ನೀಡಿದೆ. ಈ ಹಿನ್ನೆಲೆ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರ ನೇತೃತ್ವದಲ್ಲಿ ಸೆಪ್ಟಂಬರ್ 25ರಂದು ಬೆಳಿಗ್ಗೆ 10.30ರಿಂದ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಜನತಾದರ್ಶನ (Janata Darshana) ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವರು ಹೇಳಿದ್ದಾರೆ.
ಈ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಲಾಗುತ್ತಿದೆ. ರಾಜ್ಯದ ವಿವಿಧ ಭಾಗಗಳಿಂದ ನಾಗರಿಕರು ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಅಹವಾಲುಗಳನ್ನು ಸಲ್ಲಿಸುತ್ತಿದ್ದಾರೆ. ಇದನ್ನು ನಿಯಂತ್ರಿಸಿ, ಸ್ಥಳೀಯ ಸಮಸ್ಯೆಗಳಿಗೆ ಸ್ಥಳೀಯವಾಗಿಯೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಈ ಕಾರ್ಯಕ್ರಮ ಆಯೋಜಿಸಿದೆ ಎಂದು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಸೇರಿದಂತೆ ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಈ ಸಂದರ್ಭ ಜಿಲ್ಲೆಯ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು, ಸಾರ್ವಜನಿಕರ ಅಹವಾಲುಗಳಿಗೆ, ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ನಗರದ 8 ಪರೀಕ್ಷಾ ಕೇಂದ್ರದ ಸುತ್ತಲು 200 ಮೀಟರ್ ನಿಷೇಧಾಜ್ಞೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದಂತೆ ರಾಜ್ಯಾದ್ಯಂತ ಏಕಕಾಲದಲ್ಲಿ ಈ ಕಾರ್ಯಕ್ರಮವನ್ನು (Janata Darshana) ಆಯೋಜಿಸಲಾಗುತ್ತಿದೆ. ಕಾರ್ಯಕ್ರಮ ನಡೆಯುವ ದಿನ ಬೆಳಿಗ್ಗೆ 9.30ರಿಂದ ನಿಗದಿಪಡಿಸಿದ ಸ್ಥಳದಲ್ಲಿ ಖುದ್ದು ಹಾಜರಿದ್ದು ಸಾರ್ವಜನಿಕರು ತಮ್ಮ ಅವಹಾಲುಗಳನ್ನು ಸಲ್ಲಿಸಬಹುದಾಗಿದೆ. ವೈಯಕ್ತಿಕ ಅಹವಾಲು ಸಲ್ಲಿಸುವವರು ತಮ್ಮ ಅಹವಾಲನ್ನು ತಾವೊಬ್ಬರೇ ಸಲ್ಲಿಸಬಹುದಾಗಿದೆ. ಸಾರ್ವಜನಿಕವಾಗಿ ಅಹವಾಲು ಸಲ್ಲಿಸುವವರು ಗರಿಷ್ಟ ಇಬ್ಬರಿಗೆ ಅವಕಾಶವನ್ನು ನೀಡಲಾಗುವುದು. ಅರ್ಜಿ ನೋಂದಾಯಿಸಿದ ನಂತರ ಟೋಕನ್ಗಳನ್ನು ಪಡೆದುಕೊಳ್ಳಬೇಕು. ಸಾರ್ವಜನಿಕರು ತಮ್ಮ ಅಹವಾಲು ಸಲ್ಲಿಕೆಯಾದ ನಂತರ ಉಳಿಕೆಯವರಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವರು ಮನವಿ ಮಾಡಿದ್ದಾರೆ.
