ಶಿವಮೊಗ್ಗ: ಬರಪೀಡಿತ ತಾಲ್ಲೂಕುಗಳ ಮತ್ತೊಂದು ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಶಿವಮೊಗ್ಗ ಜಿಲ್ಲೆಯ ಉಳಿದ ಎರಡು ತಾಲ್ಲೂಕುಗಳನ್ನು ಈ ಪಟ್ಟಿಯಲ್ಲಿ ಪ್ರಕಟಿಸಲಾಗಿದೆ. ಈಗ ಸಾಗರ ಮತ್ತು ಹೊಸನಗರ ತಾಲ್ಲೂಕುಗಳನ್ನು ಪಟ್ಟಿಗೆ ಸೇರಿಸಲಾಗಿದ್ದು ಜಿಲ್ಲೆಯ ಎಲ್ಲಾ ತಾಲ್ಲೂಕುಗಳು ಈ ಸಾಲಿಗೆ ಸೇರಿದಂತಾಗಿದೆ. (ಶಿವಮೊಗ್ಗ ಲೈವ್.ಕಾಂ | ಮುಂದಿನ 7 ಪ್ಯಾರಾಗಳು ಕೆಳಗಿವೆ)
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಡೆಸಿದ ವೈಜ್ಞಾನಿಕ ಪರಿಶೀಲನೆ ಆಧಾರದ ಮೇಲೆ ಕಂದಾಯ ಇಲಾಖೆಯು ಈ ಆದೇಶ ಹೊರಡಿಸಿದೆ. ಹೊಸದಾಗಿ ಬರಪೀಡಿತ ಪಟ್ಟಿಗೆ ಸೇರ್ಪಡೆಯಾಗಿರುವ 9 ತಾಲ್ಲೂಕುಗಳ ಪೈಕಿ ಶಿವಮೊಗ್ಗ ಜಿಲ್ಲೆಯ ಸಾಗರ ಹಾಗೂ ಹೊಸನಗರ ತಾಲ್ಲೂಕುಗಳನ್ನು ಸಾಧಾರಣ ಬರಪೀಡಿತ ತಾಲ್ಲೂಕುಗಳೆಂದು ವರ್ಗೀಕರಿಸಲಾಗಿದೆ. ಉಳಿದಂತೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕನ್ನು ತೀವ್ರ ಬರಪೀಡಿತ, ಬೆಳಗಾವಿ ಜಿಲ್ಲೆಯ ಖಾನಾಪುರ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಮೂಡುಬಿದಿರೆ, ಮುಲ್ಕಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಸುಪಾ ಹಾಗೂ ದಾಂಡೇಲಿ ತಾಲ್ಲೂಕುಗಳನ್ನು ಸಾಧಾರಣ ಬರಪೀಡಿತ ಎಂದು ಘೋಷಿಸಲಾಗಿದೆ.

ಬರಪೀಡಿತ ತಾಲ್ಲೂಕುಗಳಲ್ಲಿ ಎಸ್ಡಿಆರ್ಎಫ್ ನಿಯಮಾವಳಿ ಪ್ರಕಾರ ತಕ್ಷಣವೇ ಅಗತ್ಯ ಪರಿಹಾರ ಮತ್ತು ನಿರ್ವಹಣಾ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗೆ ಅಧಿಕಾರ ನೀಡಲಾಗಿದೆ. ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಜಿಲ್ಲಾಧಿಕಾರಿ ಜತೆಗೆ ಜಂಟಿ ಸಮೀಕ್ಷೆ ನಡೆಸಿ ಬೆಳೆ ಹಾನಿಯ ನಿಖರ ವರದಿಯನ್ನು ತಕ್ಷಣವೇ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಕಂದಾಯ ಇಲಾಖೆ ಕಾರ್ಯದರ್ಶಿ ಹಾಗೂ ರಾಜ್ಯ ಪರಿಹಾರ ಆಯುಕ್ತರಾದ ಮನೋಜ್ ಕುಮಾರ್ ಮೀನಾ ಅವರು ಸೂಚಿಸಿದ್ದಾರೆ.
7 ತಾಲ್ಲೂಕುಗಳು ಬರಪೀಡಿತ
ಅಕ್ಟೋಬರ್ 7ರಂದು ರಾಜ್ಯ ಸರ್ಕಾರ ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಶಿಕಾರಿಪುರ, ಶಿವಮೊಗ್ಗ, ಸೊರಬ, ತೀರ್ಥಹಳ್ಳಿ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿತ್ತು. ಈ ಪೈಕಿ ಭದ್ರಾವತಿ, ಶಿವಮೊಗ್ಗ ತಾಲ್ಲೂಕುಗಳನ್ನು ತೀವ್ರ ಬರಪೀಡಿತ ಎಂದು ಘೋಷಿಸಿತ್ತು. ಉಳಿದ ತಾಲ್ಲೂಕುಗಳು ಸಾಧಾರಣ ಎಂದು ವರ್ಗೀಕರಣ ಮಾಡಿತ್ತು. ಈಗ ಮತ್ತೆರಡು ತಾಲ್ಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡಿರುವುದರಿಂದ ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲ್ಲೂಕುಗಳು ಬರಪೀಡಿತ ಎಂದು ಘೋಷಿಸಲಾಗಿದೆ.
ಫಲ ನೀಡಿತು ಮಿನಿಸ್ಟರ್ ಪ್ರಯತ್ನ
ಹೊಸನಗರ, ಸಾಗರ ತಾಲ್ಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಬೇಕು ಎಂದು ರೈತರು, ರೈತ ಸಂಘಟನೆಗಳು ಒತ್ತಾಯಿಸಿದ್ದವು. ಪ್ರತಿಭಟನೆಗಳು ನಡೆದಿದ್ದವು. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕರು, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗಿತ್ತು. ಇನ್ನು, ಸಾಗರದಲ್ಲಿ ನಡೆದ ಪ್ರಜಾಸೇವೆ ಅಂದೋಲನದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಕೂಡ ಎರಡು ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಿಸುವಂತೆ ಮನವಿ ಮಾಡಿದ್ದರು. ಸಚಿವ ಮಧು ಬಂಗಾರಪ್ಪ ಈ ಕುರಿತು ಮುಖ್ಯಮಂತ್ರಿ ಮತ್ತು ಸಂಪುಟದ ಗಮನಕ್ಕೆ ತಂದಿದ್ದರು.
ಮಿನಿಸ್ಟರ್ ಹೇಳಿದ್ದೇನು?
ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಚಿವ ಮಧು ಬಂಗಾರಪ್ಪ, “ಶಿವಮೊಗ್ಗ ಜಿಲ್ಲಾ ಪ್ರವಾಸದ ಸಂದರ್ಭ ಭೇಟಿ ನೀಡಿದ ಪ್ರತಿ ತಾಲ್ಲೂಕಿನಲ್ಲೂ ಜನರು ಹಾಗೂ ರೈತರು ಬರಪರಿಸ್ಥಿತಿ ಬಗ್ಗೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿ ಕುರಿತು ಮುಖ್ಯಮಂತ್ರಿಗೆ ತಂದು, ಬರಪೀಡಿತ ತಾಲ್ಲೂಕುಗಳೆಂದು ಘೋಷಿಸುವಂತೆ ಮನವಿ ಮಾಡಿದ್ದೆ. ಈಗ ಹಂತ ಹಂತವಾಗಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆಯಾಗಿದೆ. ಇದರಿಂದ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ಹಾಗೂ ನೆರವು ದೊರೆಯಲಿದೆ. ಸ್ವಲ್ಪಮಟ್ಟಿಗಾದರೂ ನೆಮ್ಮದಿ ಸಿಗಲಿದೆ ಎಂಬ ವಿಶ್ವಾಸವಿದೆ” ಎಂದು ತಿಳಿಸಿದ್ದಾರೆ.