ನಾಲ್ಕು ಮಂದಿಗೆ 20 ವರ್ಷ ಜೈಲು ಶಿಕ್ಷೆ, ₹1.85 ಲಕ್ಷ ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS

ಶಿವಮೊಗ್ಗ: 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಪರಿಚಯ ಮಾಡಿಕೊಂಡು ಬಾಲ್ಯ ವಿವಾಹವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ನಾಲ್ಕು ಮಂದಿ ಆರೋಪಿಗಳಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಒಟ್ಟು ₹1.85 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದೆ.

➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಏನಿದು ಪ್ರಕರಣ?

ಶಿವಮೊಗ್ಗ ತಾಲೂಕಿನ 27 ವರ್ಷದ ಯುವಕನೊಬ್ಬ 2024ನೇ ಸಾಲಿನಲ್ಲಿ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳ ಪರಿಚಯ ಮಾಡಿಕೊಂಡಿದ್ದ. ಬಳಿಕ ಆಕೆಯನ್ನು ಕಾನೂನುಬಾಹಿರವಾಗಿ ಬಾಲ್ಯ ವಿವಾಹವಾಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ. ಈ ಸಂಬಂಧ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಕುಂಸಿ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ, ಪೋಕ್ಸೋ (POCSO) ಕಾಯ್ದೆ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Shivamogga-Court-Balaraja-Urs-Road

ಪ್ರಕರಣದ ಆಗಿನ ತನಿಖಾಧಿಕಾರಿಯಾಗಿದ್ದ ಕುಂಸಿ ಪೊಲೀಸ್ ಇನ್‌ಸ್ಪೆಕ್ಟರ್ ಹರೀಶ್ ಕೆ. ಪಾಟೀಲ್ ಅವರು ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.

ಆರೋಪ ಸಾಬೀತು, ಜೈಲು ಶಿಕ್ಷೆ ಪ್ರಕಟ

ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ನಿಂಗನಗೌಡ ಭ. ಪಾಟೀಲ್ ಅವರು, ಆರೋಪಿಗಳ ಮೇಲಿನ ಅಪರಾಧ ದೃಢಪಟ್ಟ ಹಿನ್ನೆಲೆಯಲ್ಲಿ ನಾಲ್ಕು ಆರೋಪಿಗಳಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹1,85,000 ದಂಡ ವಿಧಿಸಿ ಆದೇಶಿಸಿದ್ದಾರೆ. ಇದೇ ವೇಳೆ, ನೊಂದ ಬಾಲಕಿಗೆ ₹4,00,000 ಪರಿಹಾರ ಧನ ನೀಡುವಂತೆಯೂ ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ಅವರು ವಾದ ಮಂಡಿಸಿದ್ದರು.