ಉದ್ಯೋಗ ಸೃಷ್ಟಿಗೆ ಮೊದಲ ಆದ್ಯತೆ, ಹೆಚ್ಚು ಉದ್ಯೋಗ ಒದಗಿಸುವ ಕೈಗಾರಿಕೆಗಳಿಗೆ ರಾಜ್ಯದಲ್ಲಿ ಪ್ರೋತ್ಸಾಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಫೆಬ್ರವರಿ 2021

ಸರ್ಕಾರದ ನೂತನ ಕೈಗಾರಿಕಾ ನೀತಿಯ ಪ್ರಕಾರ ಹೆಚ್ಚಿನ ಉದ್ಯೋಗಗಳನ್ನು ಸೃಜಿಸುವ ಕೈಗಾರಿಕೆಗಳಿಗೆ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಆಯೋಜಿಸಲಾಗಿದ್ದ ಮಾಚೇನಹಳ್ಳಿ ಕೈಗಾರಿಕಾ ಸಂಘದ ರಜತ ಮಹೋತ್ಸವ ಕಟ್ಟಡದ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ಕೈಗಾರಿಕೆ ಹೂಡಿಕೆಯಲ್ಲಿ ಕರ್ನಾಟಕ ಫಸ್ಟ್

ಸರ್ಕಾರ ಕೈಗಾರಿಕೆಗಳನ್ನು ಪ್ರಾರಂಭಿಸಲು ಪೂರಕ ವಾತಾವರಣ ನಿರ್ಮಿಸುತ್ತಿದೆ. ರಸ್ತೆ, ನೀರು ಪೂರೈಕೆ, ವಿದ್ಯುತ್ ಮುಂತಾದ ಮೂಲಸೌಲಭ್ಯಗಳನ್ನು ತ್ವರಿತಗತಿಯಲ್ಲಿ ಒದಗಿಸುವ ಮೂಲಕ ಕೈಗಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಬಂಡವಾಳ ಹೂಡಲು ಉತ್ತೇಜನ ನೀಡುತ್ತಿದೆ. ಪ್ರಸ್ತುತ ಕೈಗಾರಿಕಾ ಹೂಡಿಕೆಯಲ್ಲಿ ಕರ್ನಾಟಕ ಪ್ರಥಮ ಸ್ಥಾನದಲ್ಲಿದೆ. 2020ರ ನೂತನ ಕೈಗಾರಿಕಾ ನೀತಿಯ ಪ್ರಕಾರ ಹೆಚ್ಚಿನ ಉದ್ಯೋಗ ಸೃಷ್ಟಿಗೆ ಒತ್ತು ನೀಡುತ್ತಿದೆ ಎಂದರು.

ಐಟಿಐ‌ಗಳು ಮೇಲ್ದರ್ಜೆಗೆ

ರಾಜ್ಯದ ಐಟಿಐಗಳನ್ನು ಟಾಟಾ ಟೆಕ್ನಾಲಜಿ ಸಂಸ್ಥೆಯ ಸಹಯೋಗದಲ್ಲಿ 4636 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಶಿವಮೊಗ್ಗ, ಭದ್ರಾವತಿ, ಶಿಕಾರಿಪುರ, ಸಾಗರ, ತೀರ್ಥಹಳ್ಳಿ ಮತ್ತು ಕಾರ್ಗಲ್ ಐಟಿಐಗಳನ್ನು ಸಹ ಮೇಲ್ದರ್ಜೆಗೆ ಏರಿಸುವ ಮೂಲಕ ಯುವಜನತೆಗೆ ಹೆಚ್ಚಿನ ಕೌಶಲ್ಯ ಒದಗಿಸುವ ಕಾರ್ಯವನ್ನು ಸರ್ಕಾರ ಕೈಗೊಂಡಿದೆ ಎಂದು ಹೇಳಿದರು.

ಕಾರ್ಮಿಕರಿಗೆ ಮನೆಗಳು

ಕೈಗಾರಿಕಾ ವಲಯದ ಕಾರ್ಮಿಕರಿಗೆ ಮನೆಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದ್ದು, ವಿವಿಧ ಯೋಜನೆಗಳನ್ನು ಬಳಸಿಕೊಂಡು ಕಾರ್ಮಿಕರ ವಸತಿ ಯೋಜನೆಗಳನ್ನು ಅನುಷ್ಟಾನ ಗೊಳಿಸಲಾಗುವುದು ಎಂದರು.

ವಿಮಾನ ನಿಲ್ದಾಣದಿಂದ ಕೈಗಾರಿಕಾ ಬೆಳವಣಿಗೆ

ಶಿವಮೊಗ್ಗದಲ್ಲಿ ಒಂದು ವರ್ಷದ ಒಳಗಾಗಿ ಸರ್ವಸಜ್ಜಿತ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಲಿದೆ. ಇದರಿಂದ ಜಿಲ್ಲೆಯಲ್ಲಿ ಕೈಗಾರಿಕೆಗಳ ಹೆಚ್ಚಿನ ಬೆಳವಣಿಗೆ ನಿರೀಕ್ಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಪ್ರಸ್ತುತ ಬಜೆಟ್‍ನಲ್ಲಿ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಶಿವಮೊಗ್ಗ ಜಿಲ್ಲೆ ರಾಜ್ಯದ ಕೈಗಾರಿಕಾ ಬೆಳವಣಿಗೆಯಲ್ಲಿ ಹೆಚ್ಚಿನ ಕೊಡುಗೆ ನೀಡಿದೆ. ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ 3 ಸಾವಿರ ಮಂದಿಗೆ ನೇರವಾಗಿ ಮತ್ತು 2 ಸಾವಿರ ಮಂದಿಗೆ ಪರೋಕ್ಷವಾಗಿ ಉದ್ಯೋಗ ಕಲ್ಪಿಸಿದೆ. ಇಲ್ಲಿ ಪ್ರತಿ ವರ್ಷ 600 ಕೋಟಿ ರೂ. ವಹಿವಾಟು ನಡೆಸುತ್ತಿದೆ. ಸಂಘವು ಕೌಶಲ್ಯ ಅಭಿವೃದ್ಧಿಗಾಗಿ ಪ್ರತ್ಯೇಕ ಕೇಂದ್ರ ತೆರೆಯಲು ಹಾಗೂ ಮರಳು ಸುಧಾರಣಾ ಘಟಕ ಮತ್ತು ಉಪಯುಕ್ತತೆ ಕೇಂದ್ರವನ್ನು 20 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸುತ್ತಿರುವುದು ಶ್ಲಾಘನೀಯ ಎಂದು ಯಡಿಯೂರಪ್ಪ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಬಿ.ಕೆ.ಸಂಗಮೇಶ, ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡ, ಭಾರತಿ ಶೆಟ್ಟಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment