ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS, 10 DECEMBER 2024
ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ (SM Krishna) ನಿಧನಕ್ಕೆ ರಾಜ್ಯಾದ್ಯಂತ ಮೂರು ದಿನ ಶೋಕಾಚರಣೆಗೆ ಸರ್ಕಾರ ಆದೇಶಿಸಿದೆ. ಈ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ ಕಚೇರಿಗಳ ಮೇಲಿನ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತಿದೆ.
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತಿದೆ. ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆ ಶೋಕಾಚರಣೆ ಘೋಷಿಸಲಾಗಿದೆ. ಹಾಗಾಗಿ ಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತಿದೆ. ಇನ್ನು, ಡಿ.11ರಂದು ಎಲ್ಲ ಸರ್ಕಾರಿ ಕಚೇರಿಗಳು, ಶಾಲೆ, ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿದೆ.
ಜಿಲ್ಲೆಯ ನಾಯಕರ ಸಂತಾಪ
ಎಸ್.ಎಂ.ಕೃಷ್ಣ ಅವರಿಂದಲೇ ಬೆಂಗಳೂರಿಗೆ ವಿಶ್ವಮಟ್ಟದಲ್ಲಿ ಸಿಲಿಕಾನ್ ಸಿಟಿ, ಐಟಿ-ಬಿಟಿ ನಗರ ಎಂಬ ಹೆಸರು ಬಂದಿತ್ತು. ಕರ್ನಾಟಕದಲ್ಲಿ ಐಟಿ ಮತ್ತು ಬಿಟಿ ಕೈಗಾರಿಕೆಗಳ ಬೆಳವಣಿಗೆಗೆ ಬಲವಾದ ಅಡಿಪಾಯ ಹಾಕಿದ್ದರು. ಅವರು ನೀಡಿರುವ ಅನನ್ಯ ಕೊಡುಗೆಗೆ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. ಅವರ ಬದುಕು ಎಲ್ಲರಿಗೂ ಸ್ಫೂರ್ತಿ ಆಗಿದೆ.
ಬಿ.ವೈ.ರಾಘವೇಂದ್ರ, ಸಂಸದ
ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಆಧುನಿಕ ಸ್ಪರ್ಶ ನೀಡಿದ ಕೀರ್ತಿ ಮತ್ತು ಗೌರವ ಎಸ್.ಎಂ.ಕೃಷ್ಣ ಅವರಿಗೆ ಸಲ್ಲುತ್ತದೆ. ಎಸ್.ಎಂ.ಕೃಷ್ಣ ಅವರು ನಮ್ಮ ಜಿಲ್ಲೆಯ ಅಳಿಯ ಎಂಬ ಹೆಮ್ಮೆ ನಮಗಿದೆ. ಸನ್ಮಾನ್ಯರ ನಿಧನದಿಂದಾಗಿ ನಾಡಿಗೆ ತುಂಬಲಾರದ ನಷ್ಟ ಉಂಟಾಗಿದೆ.
ಮಧು ಬಂಗಾರಪ್ಪ, ಜಿಲ್ಲಾ ಉಸ್ತುವಾರಿ ಸಚಿವ
ಬೆಂಗಳೂರಿನತ್ತ ವಿಶ್ವವೇ ತಿರುಗಿನೋಡುವಂತೆ ಮಾಡಿದರು. IT-BT ನಗರಿಯನ್ನಾಗಿ ಮಾಡಿ ಕರ್ನಾಟಕದ ಆರ್ಥಿಕತೆಗೆ ಬಹು ದೊಡ್ಡ ಕೊಡುಗೆ ನೀಡುವಲ್ಲಿ ಎಸ್.ಎಂ.ಕೃಷ್ಣ ಅವರ ಕೊಡುಗೆ ಅನನ್ಯವಾಗಿದೆ.
ಎಸ್.ಎನ್.ಚನ್ನಬಸಪ್ಪ, ಶಿವಮೊಗ್ಗ ಶಾಸಕ
ದೇಶಕಂಡ ಧೀಮಂತ ನಾಯಕ, ರಾಜಕೀಯ ಮುತ್ಸದ್ದಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕೇಂದ್ರ ಮಂತ್ರಿಗಳಾಗಿದ್ದ ಶ್ರೀ ಎಸ್.ಎಂ.ಕೃಷ್ಣ ಅವರ ನಿಧನದ ಸುದ್ದಿ ಕೇಳಿ ದುಃಖವಾಗಿದೆ. ಶ್ರೀಯುತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಅಭಿಮಾನಿ ವರ್ಗಕ್ಕೆ ಮತ್ತು ರಾಜ್ಯದ ಜನತೆಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ.
ಶಾರದಾ ಪೂರ್ಯಾನಾಯ್ಕ್, ಶಿವಮೊಗ್ಗ ಗ್ರಾಮಾಂತರ ಶಾಸಕ
ಎಸ್ ಎಂ ಕೃಷ್ಣ ಅವರು ತೀರ್ಥಹಳ್ಳಿಯ ಜೊತೆ ಅವಿನಾಭಾವ ಸಂಬಂಧ ಹೊಂದಿದ್ದರು. ನನ್ನ ಬಗ್ಗೆಯೂ ಕೂಡ ವಿಶೇಷ ಪ್ರೀತಿ ಗೌರವ ಭಾವನೆ ಹೊಂದಿದ್ದರು. ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ನಮ್ಮ ಕ್ಷೇತ್ರದ ಅನೇಕ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದರು.ವಿಶೇಷವಾಗಿ ಬೆಂಗಳೂರನ್ನು ಸಿಂಗಪುರ ಮಾದರಿಯಲ್ಲಿ ಅಭಿವೃದ್ಧಿ ಪಡಿಸುವ ಬಯಕೆ ಅವರಲ್ಲಿತ್ತು.
ಆರಗ ಜ್ಞಾನೇಂದ್ರ, ತೀರ್ಥಹಳ್ಳಿ ಶಾಸಕ
ರಾಜ್ಯದ ಶ್ರೇಷ್ಠ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿ ಗುರುತಿಸಲ್ಪಟ್ಟವರು, ಕೇಂದ್ರ ಸಚಿವರಾಗಿ ಹಾಗೂ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ ನಾಡಿನ ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತರು ಹಿರಿಯ ರಾಜಕೀಯ ಮುತ್ಸದ್ಧಿ ಶ್ರೀ ಎಸ್.ಎಂ ಕೃಷ್ಣ ಅವರು ಇಂದು ನಮ್ಮನ್ನು ಅಗಲಿರುವುದು ದುಃಖದ ಸಂಗತಿ.
ಬೇಳೂರು ಗೋಪಾಲಕೃಷ್ಣ, ಸಾಗರ ಶಾಸಕ
ಎಸ್.ಎಂ.ಕೃಷ್ಣ ಅವರು ನಾಲ್ಕು ತಲೆಮಾರಿನ ರಾಜಕಾರಣದ ಬಹುದೊಡ್ಡ ಕೊಂಡಿಯಾಗಿದ್ದರು. ಆರೋಗ್ಯಕರ ಮನಸ್ಸು ಕ್ರಿಯಾಶೀಲತೆಯ ಸಂಕೇತ ಎನ್ನುವ ನಿಟ್ಟಿನಲ್ಲಿ ತಮ್ಮ ಬದುಕಿನ ಕೊನೆಯ ಉಸಿರಿರುವವರೆಗೂ ಸಂಸ್ಕಾರ ಹಾಗೂ ಸುಸಂಸ್ಕೃತ ನಡವಳಿಕೆಯನ್ನು ತಮ್ಮ ಜೀವನದ ಭಾಗವಾಗಿಸಿಕೊಂಡಿದ್ದರು. ತಮ್ಮ ರಾಜಕಾರಣದ ಜೀವನದಲ್ಲಿ ಎಂದೂ ಕಪ್ಪು ಕಲೆ ಅಂಟಿಸಿಕೊಳ್ಳದೆ ಪರಿಶುಭ್ರತೆಗೆ ಮಾದರಿಯಾಗಿದ್ದರು.
ಬಿ.ವೈ.ವಿಜಯೇಂದ್ರ, ಶಿಕಾರಿಪುರ ಶಾಸಕ
ಎಸ್.ಎಂ.ಕೃಷ್ಣ ಅವರು ನಮ್ಮನ್ನು ಬಿಟ್ಟು ಅಗಲಿದ ಸುದ್ದಿ ತಿಳಿದು ಅತೀವ ಆಘಾತವಾಗಿದೆ. ರಾಷ್ಟ್ರ, ರಾಜ್ಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದ ಎಸ್.ಎಂ.ಕೃಷ್ಣ ಅವರ ನಿಧನದಿಂದ ನಾಡು ಒಬ್ಬ ಶ್ರೇಷ್ಠ ನಾಯಕನನ್ನು ಕಳೆದುಕೊಂಡಿದೆ.
ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ
ಮೊದಲ ಬಾರಿ ವಿಧಾನಸಭೆಗೆ ಹೋದಾಗ ಎಸ್.ಎಂ.ಕೃಷ್ಣ ಸಭಾಧ್ಯಕ್ಷರಾಗಿದ್ದರು. ಸದನದಲ್ಲಿ ಹೇಗೆ ಮಾತನಾಡಬೇಕು ಎಂಬ ಕಲ್ಪನೆ ಇರಲಿಲ್ಲ. ಕ್ಷೇತ್ರದ ಸಮಸ್ಯೆಗಳನ್ನು ಸಂಬಂಧಪಟ್ಟ ಇಲಾಖೆ ಸಚಿವರಿಗೆ ನೀಡುವಂತೆ ತಿಳಿಸಿದ್ದರು. ಅವರಿಲ್ಲದಿರುವುದು ದುಃಖದ ಸಂಗತಿ. ಪಕ್ಷಾತೀತವಾಗಿ ಹೇಗೆ ಇರಬೇಕು ಎಂಬುದನ್ನು ನಾನು ಅವರಿಂದ ಕಲಿತೆ.
ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ
ಎಸ್.ಎಂ.ಕೃಷ್ಣ ಅವರ ಸಂಪುಟದಲ್ಲಿ ಸಚಿವನಾಗಿದ್ದಾಗ ನನ್ನ ಮಾರ್ಗದರ್ಶಕರು ಹಾಗೂ ಹಿತೈಷಿಗಳು ಆಗಿದ್ದ ಅವರು ನಮ್ಮನ್ನು ಅಗಲಿರುವ ಸುದ್ದಿ ಕೇಳಿ ಬಹಳ ನೋವುಂಟಾಯಿತು. ಅಗಲಿದ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ.
ಕುಮಾರ್ ಬಂಗಾರಪ್ಪ, ಮಾಜಿ ಸಚಿವ
ಇದನ್ನೂ ಓದಿ » ತೀರ್ಥಹಳ್ಳಿಯ ಅಳಿಯ ಎಸ್.ಎಂ.ಕೃಷ್ಣ ಇನ್ನಿಲ್ಲ, ಕುಡುಮಲ್ಲಿಗೆಯಲ್ಲಿ ನೀರವ ಮೌನ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422