ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಜೂನ್ 2020
ರಾಜ್ಯಾದ್ಯಂತ ಕರೋನ ಆತಂಕ ಹೆಚ್ಚುತ್ತಿದೆ. ಈ ಹಿನ್ನಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯುವಂತೆ ರಾಜ್ಯ ಸರ್ಕಾರ ಸೂಚಿಸಿದೆ. ಅದರಂತೆ ಶಿವಮೊಗ್ಗ ಜಿಲ್ಲೆಯಲ್ಲಿ 2225 ಬೆಡ್‌ಗಳ ಕೋವಿಡ್ ಕೇರ್ ಸೆಂಟರ್‌ಗಳನ್ನು ಗುರುತಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಪ್ರಮುಖ ಖಾಸಗಿ ಆಸ್ಪತ್ರೆಯ ಪ್ರತಿನಿಧಿಗಳು ಹಾಗೂ ವೈದ್ಯಾಧಿಕಾರಿಗಳೊಂದಿಗೆ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ ಈ ವಿಚಾರ ತಿಳಿಸಿದ್ದಾರೆ.
ಸರ್ಕಾರದ ಮಾರ್ಗಸೂಚಿ ಪ್ರಕಾರ ಯಾವುದೇ ರೋಗ ಲಕ್ಷಣಗಳಿಲ್ಲದ ಕರೋನಾ ಪಾಸಿಟಿವ್ ವ್ಯಕ್ತಿಗಳಿಗೆ ಚಿಕಿತ್ಸೆ ನೀಡಲು ಹಾಸ್ಟೆಲ್‍ಗಳು ಒಳಗೊಂಡಂತೆ ಕೋವಿಡ್ ಕೇರ್ ಸೆಂಟರ್‌ಗಳನ್ನು ಈಗಾಗಲೇ ಗುರುತಿಸಲಾಗಿದೆ. ಒಟ್ಟು 2225 ಬೆಡ್ ಸೌಲಭ್ಯಗಳಿರುವ ಕೋವಿಡ್ ಕೇರ್ ಸೆಂಟರ್‌ಗಳನ್ನು ಗುರುತಿಸಿ ಸಜ್ಜುಗೊಳಿಸಲಾಗಿದೆ ಎಂದರು.
ಖಾಸಗಿ ಆಸ್ಪತ್ರೆ ವೈದ್ಯರಿಗೆ ದೀರ್ಘಕಾಲದ ರಜೆ ಕಟ್
ಜಿಲ್ಲೆಯಲ್ಲಿ ಪ್ರಸ್ತುತ ಕರೋನಾ ನಿಯಂತ್ರಣದಲ್ಲಿದೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಸಿದ್ಧತೆಗಳನ್ನು ಕೈಗೊಳ್ಳುತ್ತಿದೆ. ಅಗತ್ಯ ಬಿದ್ದರೆ ಖಾಸಗಿ ವೈದ್ಯರ ಸೇವೆಯನ್ನು ಪಡೆದುಕೊಳ್ಳಲಾಗುವುದು. ಯಾವುದೇ ಆಸ್ಪತ್ರೆಗಳು ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ದೀರ್ಘ ಕಾಲದ ರಜೆ ನೀಡಬಾರದು. ರಜೆ ನೀಡುವ ಕುರಿತು ಜಿಲ್ಲಾಡಳಿತಕ್ಕೆ ಮಾಹಿತಿಯನ್ನು ಒದಗಿಸಬೇಕು.
ಮೆಗ್ಗಾನ್‌ನಲ್ಲಿಯೇ ಚಿಕಿತ್ಸೆಗೆ ಆದ್ಯತೆ
ಕರೋನಾ ಪಾಸಿಟಿವ್ ವ್ಯಕ್ತಿಗಳಿಗೆ ಚಿಕಿತ್ಸೆಯನ್ನು ಮೆಗ್ಗಾನ್‍ನಲ್ಲಿಯೇ ನೀಡಲು ಆದ್ಯತೆ ನೀಡಲಾಗುವುದು. ಖಾಸಗಿ ಆಸ್ಪತ್ರೆಗಳಿಗೆ ಪಾಸಿಟಿವ್ ವ್ಯಕ್ತಿಯನ್ನು ಕಳುಹಿಸುವ ಮೊದಲು ತಜ್ಞ ಸಮಿತಿಯಿಂದ ಅಭಿಪ್ರಾಯ ಪಡೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ, ಶಿಮ್ಸ್ ನಿರ್ದೇಶಕ ಡಾ.ಸಿದ್ಧಪ್ಪ ಸೇರಿದಂತೆ ವಿವಿಧ ಆಸ್ಪತ್ರೆಗಳ ತಜ್ಞ ವೈದ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.