ಶಿವಮೊಗ್ಗಕ್ಕೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಭೇಟಿ, ಮಹತ್ವದ ಮೀಟಿಂಗ್

ಶಿವಮೊಗ್ಗ: ಜಿಲ್ಲೆಯಲ್ಲಿ ಬಾಲ್ಯವಿವಾಹ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಶೂನ್ಯಕ್ಕೆ ಇಳಿಸಲು ಎಲ್ಲಾ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಜಗನ್ನಾಥ ಹಲಮಡಗಿ ಹಾಗೂ ವೆಂಕಟೇಶ್ ನಿರ್ದೇಶನ ನೀಡಿದರು.

ಮಕ್ಕಳ ರಕ್ಷಣಾ ಕಾನೂನುಗಳು ಹಾಗೂ ವಿವಿಧ ಸರ್ಕಾರಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಪರಿಶೀಲನೆಗಾಗಿ ನಗರಕ್ಕೆ ಭೇಟಿ ನೀಡಿದ್ದ ಅವರು, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಅವರೊಂದಿಗೆ ಪರಿಶೀಲನಾ ಸಭೆ ನಡೆಸಿದರು.

KSCPCR-members-Jagannath-Halamadagi-and-Venkatesh-visit-Shivamogga

ಸಭೆಯಲ್ಲಿ 18 ವರ್ಷದೊಳಗಿನ ಮಕ್ಕಳ ರಕ್ಷಣೆ, ಪೋಕ್ಸೋ ಕಾಯ್ದೆಯ ಅನುಷ್ಠಾನ, ಪೋಕ್ಸೋ ಸಪೋರ್ಟ್ ಪರ್ಸನ್ ವ್ಯವಸ್ಥೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಕಲ್ಯಾಣ ಸಮಿತಿಯ ಕಾರ್ಯವೈಖರಿ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಶಾಲಾ ಹಂತದಲ್ಲಿ ಸುರಕ್ಷತಾ ಜಾಗೃತಿ ಮೂಡಿಸುವುದು, ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯತಿಗಳ ನಿರ್ಮಾಣ ಹಾಗೂ ಇಲಾಖೆಗಳ ನಡುವೆ ಸಮನ್ವಯತೆ ಬಲಪಡಿಸುವಂತೆ ಆಯೋಗದ ಸದಸ್ಯರು ಸೂಚಿಸಿದರು.

ಅಲ್ಲದೆ, ನಗರ ಪ್ರದೇಶಗಳಲ್ಲಿ ಅರ್ಬನ್ ವಾರ್ಡ್ ಚೈಲ್ಡ್ ಪ್ರೊಟೆಕ್ಷನ್ ಕಮಿಟಿ ರಚನೆ, 18 ವರ್ಷದೊಳಗಿನ ಮಕ್ಕಳಿಗಾಗಿ ಗ್ರಾಮ ಸಭೆ ಆಯೋಜನೆ, ಐಇಸಿ ಚಟುವಟಿಕೆಗಳ ಚುರುಕುಗೊಳಿಸುವಿಕೆ ಹಾಗೂ ಡಿಸ್ಟ್ರಿಕ್ಟ್ ಚೈಲ್ಡ್ ಪ್ರೊಟೆಕ್ಷನ್ ಪಾಲಿಸಿ ರೂಪಿಸುವ ಕುರಿತು ಗಮನಹರಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಯಿತು. ನಂತರ ಬಾಲನ್ಯಾಯ ಮಂಡಳಿ ಸಭಾಂಗಣದಲ್ಲಿ ನಡೆದ ಮಕ್ಕಳ ಪಾಲನಾ ಸಂಸ್ಥೆಗಳ ಸಿಬ್ಬಂದಿಗಳ ಪರಿಶೀಲನಾ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಭಾರತಿ ಬಣಕಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ್ ಆರ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ತಾಜುದ್ದೀನ್ ಖಾನ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.