ಶಿವಮೊಗ್ಗ ಲೈವ್.ಕಾಂ | SHIMOGA NEWS | 2 APRIL 2021
ಕಳೆದ ಒಂದು ವಾರದ ಅವಧಿಯಲ್ಲಿ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಪಾಲಿಸುವುದು ಸೇರಿದಂತೆ ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಕೆಬಿ.ಶಿವಕುಮಾರ್, ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ಮಾರುಕಟ್ಟೆ, ವಾಣಿಜ್ಯ ಸಂಕೀರ್ಣಗಳು, ಕಲ್ಯಾಣ ಮಂಟಪಗಳು, ಸಂತೆಯಂತಹ ಕಡೆಗಳಲ್ಲಿ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸಲು ಆರಂಭಿಸಲಾಗಿದೆ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸದ ಗ್ರಾಹಕರೊಂದಿಗೆ ವ್ಯವಹರಿಸದೆ, ಮಾಸ್ಕ್ ಧರಿಸುವಂತೆ ಒತ್ತಾಯಿಸಬೇಕು ಎಂದು ಅವರು ಹೇಳಿದರು.
ಒಂದು ವಾರದಲ್ಲಿ ಸಾವಿರ ಕೇಸ್
ಕೋವಿಡ್ ಮಾರ್ಗಸೂಚಿ ಪಾಲಿಸಿ ಕಾರ್ಯಕ್ರಮಗಳನ್ನು ನಡೆಸುವ ಭರವಸೆಯೊಂದಿಗೆ ಸಾರ್ವಜನಿಕ ಸಮಾರಂಭಗಳನ್ನು ಆಯೋಜಿಸಿ, ಬಳಿಕ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಹಲವು ಪ್ರಕರಣಗಳಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಕಳೆದ ಒಂದು ವಾರದ ಅವಧಿಯಲ್ಲಿ ಒಟ್ಟು 1016 ಉಲ್ಲಂಘನೆ ಪ್ರಕರಣಗಳಲ್ಲಿ 1.63ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ಹೇಳಿದರು.
ಗಾಬರಿ ಪಡುವ ಅಗತ್ಯವಿಲ್ಲ
ಜಿಲ್ಲೆಯಲ್ಲಿ ಕೋವಿಡ್ ಸಂಪೂರ್ಣ ನಿಯಂತ್ರಣದಲ್ಲಿದ್ದು, ಕಳೆದ ಒಂದು ವಾರದ ಅವಧಿಯಲ್ಲಿ ತಪಾಸಣೆ ಪ್ರಮಾಣ ಹೆಚ್ಚಿಸಲಾಗಿದೆ. ಪ್ರಸ್ತುತ 2200 ಮಂದಿಯ ಕರೋನಾ ತಪಾಸಣೆ ನಡೆಸಲಾಗುತ್ತಿದ್ದು, ನೂರರಲ್ಲಿ 1.1ರಷ್ಟು ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿವೆ. ನೆರೆಯ ಜಿಲ್ಲೆಗಳಲ್ಲಿ ಕರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಸಾರ್ವಜನಿಕರು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿದರೆ ಮಾತ್ರ ಕರೋನಾ ನಿಯಂತ್ರಣದಲ್ಲಿ ಇಡಬಹುದಾಗಿದೆ. ಜನರು ನಿರ್ಲಕ್ಷ್ಯ ಮಾಡಿದರೆ ಮುಂದಿನ ದಿನಗಳಲ್ಲಿ ಸಂಕಷ್ಟವನ್ನು ಎದುರಿಸಬೇಕಾಗಬಹುದು ಎಂದು ಕೆ.ಬಿ.ಶಿವಕುಮಾರ್ ಹೇಳಿದರು.
VIDEO REPORT
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]