ಅಧಿಕಾರಿಗಳ ಅಮಾನತಿಗೆ ಶಿಫಾರಸು, ಶಾಸಕ ಚನ್ನಬಸಪ್ಪ ಎಚ್ಚರಿಕೆ

ಶಿವಮೊಗ್ಗ: ಕುಡಿಯುವ ನೀರಿನ ಸಮಸ್ಯೆ ಹೇಳಿಕೊಳ್ಳಲು ಬರುವ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ನಡೆದುಕೊಳ್ಳುವ ಅಧಿಕಾರಿಗಳು ಅಥವಾ ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ ಜರುಗಿಸಿ, ಅಮಾನತು ಮಾಡಲು ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಎಚ್ಚರಿಕೆ ನೀಡಿದ್ದಾರೆ.

ನಗರದ ವಿವಿಧ ಬಡಾವಣೆಗಳಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ತೊಂದರೆಯಾಗುತ್ತಿರುವ ಬಗ್ಗೆ ಹಾಗೂ ದೂರು ನೀಡಲು ಹೋದಾಗ ಅಧಿಕಾರಿಗಳು ದುರಹಂಕಾರದ ಉತ್ತರ ನೀಡುತ್ತಿದ್ದಾರೆ ಎಂಬ ದೂರುಗಳು ಸಾರ್ವಜನಿಕರಿಂದ ಬಂದ ಹಿನ್ನೆಲೆ, ಶಾಸಕರು ಜಲಮಂಡಳಿ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳ ತುರ್ತು ಸಭೆ ಕರೆದು ತರಾಟೆಗೆ ತೆಗೆದುಕೊಂಡರು.

MLA-Channabasappa-holds-meeting-with-Water-Supply-Borad-officials

ಸಭೆಯಲ್ಲಿ ಮಾತನಾಡಿದ ಶಾಸಕರು, “ಸಾರ್ವಜನಿಕರ ಸಮಸ್ಯೆಗಳನ್ನು ಸೌಜನ್ಯದಿಂದ ಆಲಿಸಿ ತಕ್ಷಣವೇ ಪರಿಹರಿಸುವುದು ಅಧಿಕಾರಿಗಳ ಕರ್ತವ್ಯ. ಜನಸಾಮಾನ್ಯರ ಮೇಲೆ ದರ್ಪ ತೋರುವುದನ್ನು ಸಹಿಸುವುದಿಲ್ಲ” ಎಂದರು. ಇದೇ ವೇಳೆ ನಗರದಲ್ಲಿ 24/7 ಕುಡಿಯುವ ನೀರಿನ ಕಾಮಗಾರಿ ವಿಳಂಬವಾಗುತ್ತಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ನಿಗದಿತ ಅವಧಿಯೊಳಗೆ ಕಾಮಗಾರಿ ಮುಗಿಸಿ ನಾಗರಿಕರಿಗೆ ಕುಡಿಯುವ ನೀರು ಒದಗಿಸಬೇಕು. ನೀರು ಪೂರೈಕೆಯಲ್ಲಿ ತೊಂದರೆಯಾಗಿರುವ ಪ್ರದೇಶಗಳಿಗೆ ತಕ್ಷಣ ಟ್ಯಾಂಕರ್ ಮೂಲಕ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಆದೇಶಿಸಿದರು. ಕರ್ತವ್ಯಲೋಪ ಕಂಡುಬಂದಲ್ಲಿ ಕ್ರಮ ಖಚಿತ ಎಂದು ಅವರು ಎಚ್ಚರಿಸಿದರು.