SHIVAMOGGA LIVE NEWS | 8 ಮಾರ್ಚ್ 2022
ಶಿವಮೊಗ್ಗದ ಪ್ರತಿಷ್ಠಿತ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತ ಮಹೋತ್ಸವದ ಅಂಗವಾಗಿ ವಿಶೇಷ ಅಂಚೆ ಲಕೋಟೆ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಮೃತ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ. ಪಿ.ನಾರಾಯಣ ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಮೃತ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ. ಪಿ.ನಾರಾಯಣ ಅವರು, ಶಿಕ್ಷಣ ಸಂಸ್ಥೆಗೆ 75 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಭಾರತೀಯ ಅಂಚೆ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಅಂಚೆ ಲಕೋಟೆ ಬಿಡುಗಡೆ ಮಾಡಲಾಗುತ್ತಿದೆ. ಮಾ.10ರಂದು ಸಂಜೆ 4.30ಕ್ಕೆ ಎನ್ಇಎಸ್ ಕಾರ್ಯಾಲಯದ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ದಕ್ಷಿಣ ವಲಯ ಪೋಸ್ಟ್ ಮಾಸ್ಟರ್ ಜನರಲ್ ಡಿ.ಎಸ್.ವಿ.ಆರ್. ಮೂರ್ತಿ ಅವರು ಅಂಚೆ ಲಕೋಟೆ ಬಿಡುಗಡೆ ಮಾಡಲಿದ್ದಾರೆ. ಮೇಯರ್ ಸುನೀತಾ ಅಣ್ಣಪ್ಪ, ಶಿವಮೊಗ್ಗ ವಿಭಾಗ ಅಂಚೆ ಅಧೀಕ್ಷಕ ಜಿ.ಹರೀಶ್, ಉನ್ನತ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಡಿ.ರೇವಣಕರ್, ಡಿಡಿಪಿಐ ಎನ್.ಎಂ.ರಮೇಶ್ ಭಾಗಹಿಸಲಿದ್ದಾರೆ ಎಂದು ತಿಳಿಸಿದರು.
ಇಸ್ರೋ ಮಾಜಿ ಅಧ್ಯಕ್ಷರಿಂದ ಉಪನ್ಯಾಸ
ಅಮೃತ ಮಹೋತ್ಸವದ ಹಿನ್ನೆಲೆ ಉಪನ್ಯಾಸ ಸರಣಿ ಆಯೋಜಿಸಲಾಗಿದೆ. ಇಸ್ರೋ ಮಾಜಿ ಅಧ್ಯಕ್ಷ ಶಿವನ್ ಅವರು ಮೊದಲ ಉಪನ್ಯಾಸ ನೀಡಲಿದ್ದಾರೆ. ಮಾ.12ರಂದು ಮಧ್ಯಾಹ್ನ 3 ಗಂಟೆಗೆ ಜೆ.ಎನ್.ಎನ್. ಎಂಜನಿಯರಿಂಗ್ ಕಾಲೇಜಿನಲ್ಲಿ ಕಾರ್ಯಕ್ರಮ ನಡೆಯಲಿದೆ. ‘ದೈನಂದಿನ ಜೀವನದಲ್ಲಿ ಬಾಹ್ಯಾಕಾಶ ತಂತ್ರಜ್ಞಾನದ ಪ್ರಭಾವ’ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ತಿಳಿಸಿದರು
ವರ್ಷವಿಡಿ ವಿಶೇಷ ಕಾರ್ಯಕ್ರಮ
ಅಮೃತ ಮಹೋತ್ಸವದ ಅಂಗವಾಗಿ ವರ್ಷವಿಡಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಪ್ರತಿ ತಿಂಗಳು ಉಪನ್ಯಾಸ, ವೈಜ್ಞಾನಿಕ, ಸಾಹಿತ್ಯ, ಸಾಂಸ್ಕೃತಿಕ ಕಾರ್ಯ ಚಟುವಟಿಕೆಗಳನ್ನು ನಡೆಸಲಾಗುತ್ತದೆ. ಅಮೃತ ಮಹೋತ್ಸವದ ಅಂಗವಾಗಿ ಶಾಶ್ವತ ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತದೆ ಎಂದು ಡಾ. ಪಿ.ನಾರಾಯಣ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಎನ್ಇಎಸ್ ಅಧ್ಯಕ್ಷ ಎ.ಎಸ್.ವಿಶ್ವನಾಥ್, ಉಪಾಧ್ಯಕ್ಷ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಸಹ ಕಾರ್ಯದರ್ಶಿ ಡಿ.ಆರ್.ಅಮರೇಂದ್ರ ಕಿರೀಟಿ, ಖಜಾಂಚಿ ಸಿ.ಆರ್.ನಾಗರಾಜ, ಕುಲಸಚಿವ ಪ್ರೊ.ಟಿ.ಎಸ್.ಹೂವಯ್ಯಗೌಡ, ಸಹಾಯಕ ಕುಲಸಚಿವ ಪ್ರೊ. ಎನ್.ಕೆ.ಹರಿಯಪ್ಪ, ಸಾರ್ವಜನಿಕ ಸಂಪರ್ಕ ಅಧಿಕಾರಿ ಸಿ.ಎಂ.ನೃಪತುಂಗ ಉಪಸ್ಥಿತರಿದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200