ಪೊಲೀಸ್‌ ಕಾನ್‌ಸ್ಟೇಬಲ್‌ ಪರೀಕ್ಷೆ, ಶಿವಮೊಗ್ಗದಲ್ಲಿ ಹೇಗಿದೆ ಸಿದ್ಧತೆ? ಎಷ್ಟು ಕೇಂದ್ರದಲ್ಲಿ ನಡೆಯುತ್ತೆ ಪರೀಕ್ಷೆ?

ಶಿವಮೊಗ್ಗ: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕಾನ್‌ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್.ವಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಾತನಾಡಿದರು. ಸೆಪ್ಟೆಂಬರ್ 20ರಂದು ಶಿವಮೊಗ್ಗದ 29 ಮತ್ತು ಭದ್ರಾವತಿಯ 5 ಕೇಂದ್ರಗಳು ಸೇರಿದಂತೆ ಒಟ್ಟು 34 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಆರ್‌ಪಿಸಿ 11,712 ಹಾಗೂ ಕೆಕೆ 4,118 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಬೆಳಿಗ್ಗೆ ಮತ್ತು ಮಧ್ಯಾಹ್ನ ಎರಡು ಅವಧಿಯಲ್ಲಿ ಪರೀಕ್ಷೆಗಳು ನಡೆಯಲಿದೆ ಎಂದು ತಿಳಿಸಿದರು.

Police-Constable-Exam-meeting-by-ADC-Abhishek-at-Shimoga

ಅಭ್ಯರ್ಥಿಗಳಿಗೆ ಹಾಲ್ ಟಿಕೆಟ್ ಸ್ಕ್ಯಾನ್ ಮಾಡಿ ಮುಖ ಗುರುತಿಸುವಿಕೆ ಪ್ರಕ್ರಿಯೆ ನಡೆಸಿದ ಬಳಿಕ ಒಳಗೆ ಬಿಡಲಾಗುತ್ತದೆ. ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರದೊಳಗೆ ವಾಚ್, ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ತಿಂಡಿ-ತಿನಿಸುಗಳಿಗೆ ಸಂಪೂರ್ಣ ನಿಷೇಧವಿದೆ. ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ ಹಾಗೂ ಪ್ರತಿ 5 ಕೇಂದ್ರಗಳಿಗೆ ಒಂದರಂತೆ ಫ್ಲೈಯಿಂಗ್ ಸ್ಕ್ವಾಡ್ ತಂಡಗಳನ್ನು ನಿಯೋಜಿಸಲಾಗಿದೆ. ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕಾರಿಯಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.