SHIVAMOGGA LIVE NEWS | 5 SEPTEMBER 2023
ಪಡಿತರ ಅಕ್ಕಿ ಕಳ್ಳ ಸಾಗಣೆ, ಕಠಿಣ ಕ್ರಮಕ್ಕೆ ಒತ್ತಾಯ
BHADARAVATHI : ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುವವರು ಮತ್ತು ಕಾಳ ಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತರ ಶಶಿಕುಮಾರ್ ಗೌಡ ದೂರು ನೀಡಿದರು. ಭದ್ರಾವತಿಯ ಕಾಗದ ನಗರ ಪೊಲೀಸ್ ಠಾಣೆಯಲ್ಲಿ ಅವರು ದೂರು ಸಲ್ಲಿಸಿದರು. ಅಕ್ಕಿಯನ್ನು ಅಕ್ರಮವಾಗಿ ಮಾರಾಟ ದಂಧೆಯಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಅನ್ನುವುದನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮಾತೆ ಮರಿಯಮ್ಮ ಜಯಂತಿ, ಮೆರವಣಿಗೆ
BHADARAVATHI : ಗಾಂಧಿ ನಗರದ ಅಮಲಾದೇವಿ ಚರ್ಚ್‌ನಲ್ಲಿ ಮಾತೆ ಮರಿಯಮ್ಮ ಜಯಂತಿ ಆಚರಿಸಲಾಯಿತು. ಇದರ ಅಂಗವಾಗಿ ಜಪಸ್ವರ ಮೆರವಣಿಗೆ ನಡೆಸಲಾಯಿತು. ಫಾ.ಲ್ಯಾನ್ಸಿ ಡಿಸೋಜಾ ಅವರ ನೇತೃತ್ವದಲ್ಲಿ ಮೆರವಣಿಗೆ ನಡೆಯಿತು. ಇದೇ ವೇಳೆ ಚರ್ಚ್‌ನಲ್ಲಿ ವಿಶೇಷ ಪ್ರಾರ್ಥನಾ ಸಭೆ ನಡೆಸಲಾಯಿತು.
ಭದ್ರಾವತಿಯಲ್ಲಿ ಹಬ್ಬದ ಹಿನ್ನೆಲೆ ಶಾಂತಿ ಸಭೆ
BHADARAVATHI : ಗೌರಿ–ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆ ಭದ್ರಾವತಿಯ ಕಂಟ್ರಿ ಕ್ಲಬ್ ಕಮ್ಯೂನಿಟಿ ಹಾಲ್‌ನಲ್ಲಿ ಹಬ್ಬದ ಸಂಘಟನಾ ಕಮಿಟಿ, ಮುಖಂಡರು ಮತ್ತು ಸಾರ್ವಜನಿಕರ ಸಭೆ ನಡೆಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿತ್ತು. ಈ ವೇಳೆ ಶಾಂತಿಯುತವಾಗಿ ಹಬ್ಬ ಆಚರಣೆ ಕುರಿತು ವಿವಿಧ ಮಾರ್ಗಸೂಚಿಗಳನ್ನು ತಿಳಿಸಲಾಯಿತು. ಭದ್ರಾವತಿ ಡಿವೈಎಸ್‌ಪಿ ನಾಗರಾಜ್, ಭದ್ರಾವತಿ ನಗರ ಸರ್ಕಲ್ ಇನ್ಸ್‌ಪೆಕ್ಟರ್ ಶೈಲಕುಮಾರ್, ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್ ಗುರುರಾಜ್ ಮೈಲಾರ್, ಹೊಳೆಹೊನ್ನೂರು ಠಾಣೆ ಇನ್ಸ್‌ಪೆಕ್ಟರ್ ಲಕ್ಷ್ಮಿಪತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಆಗುಂಬೆ ಸಮೀಪ ತೋಟಕ್ಕೆ ಉರುಳಿದ ಕಾರು
THIRTHAHALLI : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆಯಿಂದ ಪಕ್ಕದ ತೋಟಕ್ಕೆ ಉರುಳಿದೆ. ಘಟನೆಯಲ್ಲಿ ಮೂವರಿಗೆ ಗಾಯವಾಗಿದ್ದು ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಗುಂಬೆ ಸಮೀಪ ಕಲ್ಮನೆ ಬಳಿ ಘಟನೆ ಸಂಭವಿಸಿದೆ. ಕಾರು ಕಾರ್ಕಳದಿಂದ ಶಿವಮೊಗ್ಗ ಮಾರ್ಗವಾಗಿ ತರೀಕೆರೆಗೆ ತೆರಳುತ್ತಿತ್ತು. ಕಾರಿನಲ್ಲಿದ್ದವರು ಸ್ಥಳೀಯರನ್ನು ರಕ್ಷಣೆ ಮಾಡಿದ್ದಾರೆ. ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ರಾಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ
THIRTHAHALLI : ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಸೆ.10 ಮತ್ತು 11ರಂದು ಮಹಾರುದ್ರ ಪುರಶ್ಚರಣ ಹೋಮ ಹಮ್ಮಿಕೊಳ್ಳಲಾಗಿದೆ. ಭಕ್ತರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ದೇವಸ್ಥಾನ ಸಮಿತಿಯ ಸೊಪ್ಪುಗುಡ್ಡೆ ರಾಘವೇಂದ್ರ ತಿಳಿಸಿದ್ದಾರೆ. ಎರಡು ದಿನ ವಿಶೇಷ ಪೂಜೆಗಳನ್ನು ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು.
ಹೊಸನಗರದ ಶಶಿಕಲಾಗೆ ಸಿಎಂ ಕಚೇರಿ ನೆರವು
HOSANAGARA : ತಾಲೂಕಿನ ಮಾರುತಿಪುರ ಸಮೀಪದ ಮೇಲಿನಸಂಪಳ್ಳಿಯ ಶಶಿಕಲಾ ಅವರ ಸಂಕಷ್ಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವು ನೀಡಿದ್ದಾರೆ. ಕಡುಬಡತನದ ಜೊತೆಗೆ ಅಂಗವೈಕಲ್ಯದಿಂದ ಬಳಲುತ್ತಿರುವ 20 ವರ್ಷದ ಮಗಳ ಜವಾಬ್ದಾರಿಯನ್ನು ಶಶಿಕಲಾ ಅವರು ಹೆಗಲ ಮೇಲೆ ಹೊತ್ತಿದ್ದಾರೆ. ಶಶಿಕಲಾ ಅವರ ಬಳಿ ಆಧಾರ್ ಕಾರ್ಡ್, ಪಡಿತರ ಚೀಟಿ ಇಲ್ಲದೆ ಗೃಹಲಕ್ಷ್ಮಿ ಯೋಜನೆಯಿಂದ ವಂಚಿತವಾಗಿದ್ದರು. ಈ ಸಂಬಂಧ ಪತ್ರಕರ್ತ ರವಿ ಬಿದನೂರು ಅವರು ಸಿಎಂ ಕಚೇರಿಯ ಗಮನ ಸೆಳೆದಿದ್ದರು. ಕೂಡಲೆ ಅಧಿಕಾರಿಗಳನ್ನು ಮನೆಗೆ ಕಳುಹಿಸಿ ಎಲ್ಲಾ ವ್ಯವಸ್ಥೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200