ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 17 JANUARY 2023
SHIMOGA | ತಾಲೂಕಿನಲ್ಲಿ 130ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿಢೀರ್ ಅಸ್ವಸ್ಥಗೊಂಡು (students ill) ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಯೋಗಥಾನ್ ಕಾರ್ಯಕ್ರಮದಲ್ಲಿ ನೀಡಲಾದ ಆಹಾರವೆ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ.
ಯೋಗಥಾನ್ ಮೇಲೆ ಶಂಕೆ
ರಾಷ್ಟ್ರೀಯ ಯವ ದಿನದ ಅಂಗವಾಗಿ ರಾಜ್ಯಾದ್ಯಂತ ಯೋಗಥಾನ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಏಕಕಾಲಕ್ಕೆ 4.05 ಲಕ್ಷ ಜನರು ಯೋಗ ಮಾಡಿದ್ದು, ಗಿನ್ನಿಸ್ ದಾಖಲೆಯಾಗಿದೆ. ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿಯು ಯೋಗಥಾನ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರಲ್ಲಿ ಭಾಗವಹಿಸಿದ ಮಕ್ಕಳಲ್ಲಿ ವಾಂತಿ, ಹೊಟ್ಟೆ ನೋವು (students ill) ಕಾಣಿಸಿಕೊಂಡಿದೆ ಎಂದು ಆರೋಪಿಸಲಾಗಿದೆ.
ವಿದ್ಯಾರ್ಥಿನಿ ಆರೋಪ
ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯರು ಯೋಗಥಾನ್ ಕಾರ್ಯಕ್ರಮದಲ್ಲಿ ನೀಡಿದ ತಿಂಡಿಯ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ.
ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿನಿ ಮಾತನಾಡಿ, ‘ಯೋಗಥಾನ್ ಕಾರ್ಯಕ್ರಮದಲ್ಲಿ ಟೊಮೊಟೊ ಬಾತ್, ಚಟ್ನಿ, ಮಜ್ಜಿಗೆ ಕೊಟ್ಟಿದ್ದರು. ತಿಂದಾಗ ಎಲ್ಲವು ಚನ್ನಾಗಿತ್ತು. ನಿನ್ನೆ ರಾತ್ರಿ ಹೊಟ್ಟೆನೋವು ಕಾಣಿಸಿಕೊಂಡಿದೆ. ನನ್ನ ಸ್ನೇಹಿತೆಯರೆಲ್ಲರ ಆರೋಗ್ಯ ಕೆಟ್ಟಿದೆ. ಎಲ್ಲರು ಇಲ್ಲಿಗೆ ಬಂದು ದಾಖಲಾಗಿದ್ದೇವೆ’ ಎಂದು ತಿಳಿಸಿದರು.
ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯ
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ವಿಷಪೂರಿತ ಆಹಾರ ಪೂರೈಕೆ ಮಾಡಿರುವುದರಿಂದ ಮಕ್ಕಳು ಅಸ್ವಸ್ಥರಾಗಿದ್ದಾರೆ. ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಕ್ಕಳ ಆರೋಗ್ಯದ ಕುರಿತು ನಿಗಾ ವಹಿಸಬೇಕಿದೆ. ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೆ ಅಮಾನತು ಮಾಡಬೇಕು ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು. ಈ ಸಂಬಂಧ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.
‘ಯೋಗ್ಯವಲ್ಲದ ಎಳ್ಳು, ಬೆಲ್ಲವನ್ನು ಮಕ್ಕಳಿಗೆ ಕೊಟ್ಟಿದ್ದಾರೆ. ಇದನ್ನು ತಿಂದ ಮಕ್ಕಳು ಅಸ್ವಸ್ಥರಾಗಿದ್ದಾರೆ. ಬಿಜೆಪಿ ಸರ್ಕಾರಕ್ಕೆ ಅನುಕೂಲ ಮಾಡಿಕೊಡಲು ಹೋಗಿ ಉತ್ತಮ ಗುಣಮಟ್ಟದ ಆಹಾರ ಕೊಡದಿರುವ ಅಧಿಕಾರಿಗಳನ್ನು ಅಮಾನತು ಮಾಡಬೇಕು. ನ್ಯಾಯಾಂಗ ತನಿಕೆಯಾಗಬೇಕು’ ಎಂದು ಕೆಪಿಸಿಸಿ ಕಾರ್ಯದರ್ಶಿ ಕೆ.ದೇವೇಂದ್ರಪ್ಪ ಆಗ್ರಹಿಸಿದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಯೋಗಥಾನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಆಹಾರ ನೀಡಲಾಗಿತ್ತು. ಇದನ್ನು ಸೇವಿಸಿದ ಮಕ್ಕಳು ಅಸ್ವಸ್ಥರಾಗಿದ್ದಾರೆ. ಈ ಸಂಬಂಧ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಲ್ಲದೆ ಅಸ್ವಸ್ಥ ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಆಗ್ರಹಿಸಿದರು.
ಪಾಲಿಕೆ ವಿಪಕ್ಷ ನಾಯಕಿ ಆಸ್ಪತ್ರೆಗೆ ಭೇಟಿ
ಶಿವಮೊಗ್ಗ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಅವರು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದರು. ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಅಸ್ವಸ್ಥ ಮಕ್ಕಳ ಸಂಖ್ಯೆ ಹೆಚ್ಚಳ, 100ಕ್ಕಿಂತಲೂ ಹೆಚ್ಚು ಮಕ್ಕಳು ಆಸ್ಪತ್ರೆಗೆ, ಜಿಲ್ಲಾಧಿಕಾರಿ ಭೇಟಿ
ಹನಸವಾಡಿಯ ಮೊರಾರ್ಜಿ ವಸತಿ ಶಾಲೆ, ಶಿವಮೊಗ್ಗ ಹಿಂದುಳಿದ ವರ್ಗಗಳ ಹಾಸ್ಟೆಲ್ ವಿದ್ಯಾರ್ಥಿನಿಯರು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422