ಶಿವಮೊಗ್ಗ: ನಗರದ ವಿಮಾನ ನಿಲ್ದಾಣದಿಂದ ವಿಮಾನ ಸೇವೆ ಸಂಪೂರ್ಣವಾಗಿ ಸ್ಥಗಿತಗೊಳ್ಳುವ ಆತಂಕ ಎದುರಾಗಿದ್ದು, ಕನಿಷ್ಠ ಶಿವಮೊಗ್ಗ–ಬೆಂಗಳೂರು ನಡುವೆಯಾದರೂ ವಿಮಾನ ಸಂಚಾರ ಮುಂದುವರಿಸಲು ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಆಗ್ರಹಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 60 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಇಂಡಿಗೋ ಸಂಸ್ಥೆಯ ವಿಮಾನ ಸೇವೆ ಸ್ಥಗಿತಗೊಂಡಿದೆ. ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿ ಕಾರ್ಯಾಚರಣೆ ನಡೆಸುತ್ತಿದ್ದ ಸ್ಟಾರ್ ಏರ್ಲೈನ್ಸ್ ಸೇವೆಗೆ ನೀಡಲಾಗುತ್ತಿದ್ದ ಆರ್ಥಿಕ ನೆರವಿನ ಅವಧಿ ಪೂರ್ಣಗೊಳ್ಳುತ್ತಿದೆ. ನವೆಂಬರ್ 21 ರಿಂದ ಈ ಸೇವೆಯೂ ಸ್ಥಗಿತಗೊಳ್ಳಲಿದೆ. ಇದರಿಂದ ಮಲೆನಾಡು ಭಾಗದ ವಾಣಿಜ್ಯ, ಕೈಗಾರಿಕೆ ಹಾಗೂ ಪ್ರವಾಸೋದ್ಯಮ ಕ್ಷೇತ್ರಕ್ಕೆ ತೀವ್ರ ಹಿನ್ನಡೆಯಾಗಲಿದೆ ಎಂದರು.

ಕಲಬುರಗಿ ಹಾಗೂ ಬೀದರ್ ವಿಮಾನ ನಿಲ್ದಾಣಗಳಿಗೆ ರಾಜ್ಯ ಸರ್ಕಾರ ವಿಜಿಎಫ್ (ವಿಜಿಯಾಬಿಲಿಟಿ ಗ್ಯಾಪ್ ಫಂಡಿಂಗ್) ಯೋಜನೆಯಡಿ ಸಬ್ಸಿಡಿ ನೀಡುತ್ತಿರುವ ಮಾದರಿಯಲ್ಲೇ ಶಿವಮೊಗ್ಗಕ್ಕೂ ಆರ್ಥಿಕ ನೆರವು ನೀಡಬೇಕು. ವರ್ಷಕ್ಕೆ ₹15 ಕೋಟಿ ಅನುದಾನ ಒದಗಿಸುವುದು ಸರ್ಕಾರಕ್ಕೆ ದೊಡ್ಡ ಹೊರೆಯಾಗುವುದಿಲ್ಲ ಎಂದು ರಾಘವೇಂದ್ರ ತಿಳಿಸಿದರು.
ಮಲೆನಾಡಿನ ಜನರ ವ್ಯಾಪಾರ, ಶೈಕ್ಷಣಿಕ ಹಾಗೂ ವೈದ್ಯಕೀಯ ಅಗತ್ಯಗಳಿಗಾಗಿ ಶಿವಮೊಗ್ಗ-ಬೆಂಗಳೂರು ನಡುವೆ ಕನಿಷ್ಠ ಒಂದು ವಿಮಾನ ಸೇವೆಯಾದರೂ ನಿರಂತರವಾಗಿ ನಡೆಯುವಂತೆ ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಬೇಕು. ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗಿದೆ. ಕಳೆದ ಮೂರು ವರ್ಷಗಳಲ್ಲಿ 4.29 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಈ ನಿಲ್ದಾಣದಿಂದ ಸಂಚರಿಸಿದ್ದಾರೆ. ಹೀಗಾಗಿ ಸರ್ಕಾರ ಮಲತಾಯಿ ಧೋರಣೆ ಬಿಟ್ಟು ವಿಮಾನ ಸೇವೆ ಉಳಿಸಿಕೊಳ್ಳಲು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ರಾಘವೇಂದ್ರ ಒತ್ತಾಯಿಸಿದ್ದಾರೆ.