ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 14 JUNE 2023
SHIMOGA : ವಿದ್ಯುತ್ ದರ ಹೆಚ್ಚಳ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಬಿಜೆಪಿಯ ಕೆಲ ಕಾರ್ಯಕರ್ತರು ಮೆಸ್ಕಾಂ ಕಚೇರಿಯ ಕಿಟಕಿ, ನೊಟೀಸ್ ಬೋರ್ಡ್ ಗಾಜುಗಳಿಗೆ ಕಲ್ಲು (Stone Pelting) ತೂರಿದ್ದಾರೆ. ಇದೆ ವೇಳೆ ಪೊಲೀಸರು ಶಿವಮೊಗ್ಗ ಶಾಸಕ ಚನ್ನಬಸಪ್ಪ ಸೇರಿ ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗ ರೈಲ್ವೆ ನಿಲ್ದಾಣ ಬಳಿ ಇರುವ ಮೆಸ್ಕಾಂ ಕಚೇರಿಗೆ ಇವತ್ತು ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದರು. ಈ ವೇಳೆ ಕೆಲವು ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದರು. ಇದರಿಂದ ಮೆಸ್ಕಾಂ ಕಚೇರಿ ಆವರಣದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಪ್ರತಿಭಟನಾ ಸಭೆ ಬಳಿಕ ಮುತ್ತಿಗೆ
ವಿದ್ಯುತ್ ದರ ಹೆಚ್ಚಳ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ನಗರ ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ ಮತ್ತು ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಮೆಸ್ಕಾಂ ಕಚೇರಿ ಮುಂಭಾಗ ಪ್ರತಿಭಟನಾ ಸಭೆ ನಡೆಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಈ ವೇಳೆ ಕೆಲವು ಬಿಜೆಪಿ ಕಾರ್ಯಕರ್ತರು ಮೆಸ್ಕಾಂ ಕಚೇರಿಯ ಕಿಟಕಿಗೆ ಕಲ್ಲು ತೂರಿದರು (Stone Pelting). ಇನ್ನು ಕೆಲವು ಕಾರ್ಯಕರ್ತರು ಕಚೇರಿ ಒಳಗೆ ನುಗ್ಗಿ ನೊಟೀಸ್ ಬೋರ್ಡ್ನ ಗಾಜು ಒಡೆದರು.
ಬಂದೋಬಸ್ತ್, ಬಿಗುವಿನ ವಾತಾವರಣ
ಬಿಜೆಪಿ ಕಾರ್ಯಕರ್ತರ ಮುತ್ತಿಗೆ ಹಿನ್ನಲೆ ಪೊಲೀಸರು ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಿದ್ದರು. ಆದರೂ ಬಿಜೆಪಿ ಕಾರ್ಯಕರ್ತರು ಪೊಲೀಸರನ್ನು ತಳ್ಳಿ ಕಚೇರಿ ಅವರಣದೊಳಗೆ ನುಗ್ಗಿ, ಕಲ್ಲು ತೂರಾಟ ನಡೆಸಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾದರು. ಆಗ ನೂಕಾಟ, ತಳ್ಳಾಟ ಉಂಟಾಯಿತು. ಇದರಿಂದ ಮೆಸ್ಕಾಂ ಕಚೇರಿ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು.
ಶಾಸಕ ಸೇರಿ ಹಲವರು ವಶಕ್ಕೆ
ಇದೆ ವೇಳೆ ಶಾಸಕ ಎಸ್.ಎನ್.ಚನ್ನಬಸಪ್ಪ, ಮೇಯರ್ ಶಿವಕುಮಾರ್ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದರು. ಪೊಲೀಸ್ ವ್ಯಾನಿನಲ್ಲಿ ಎಲ್ಲರನ್ನು ಕರೆದೊಯ್ಯುವ ವೇಳೆ ಬಿಜೆಪಿ ಕಾರ್ಯಕರ್ತರು ಪೊಲೀಸ್ ವ್ಯಾನ್ಗೆ ಅಡ್ಡಲಾಗಿ ಕುಳಿತು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ರಸ್ತೆಯಲ್ಲಿ ಕೆಎಸ್ಅರ್ಟಿಸಿ ಬಸ್ ಅಡ್ಡಗಟ್ಟಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ರಸ್ತೆಯಲ್ಲಿ ದಿಢೀರ್ ಪ್ರತಿಭಟನೆ ನಡೆಸಿದ್ದರಿಂದ ಕೆಲ ನಿಮಿಷ ಮೆಸ್ಕಾಂ ಎದುರಿನ ಸರ್ಕಲ್ನಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಯಿತು. ಪೊಲೀಸರು ಉಳಿದ ಕಾರ್ಯಕರ್ತರನ್ನು ವಶಕ್ಕೆ ಪಡೆದು ಪರಿಸ್ಥಿತಿ ತಿಳಿಗೊಳಿಸಿದರು.
ಇದನ್ನೂ ಓದಿ – ಸಿಗಂದೂರು ಲಾಂಚ್, ಸ್ಥಳೀಯರಿಗೆ ಸಂಕಷ್ಟ, ಪ್ರವಾಸಿಗರಿಗೆ ಸಮಸ್ಯೆ ನಿಶ್ಚಿತ, ವಾಹನಗಳಿಗೆ ಇಲ್ಲಿದೆ ಪರ್ಯಾಯ ಮಾರ್ಗ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422