ಶಿವಮೊಗ್ಗ: ಸೋಗಾನೆ ವಿಮಾನ ನಿಲ್ದಾಣದಲ್ಲಿ ವಿಮಾನಯಾನ ಸೇವೆ ಸ್ಥಗಿತಗೊಳ್ಳದಂತೆ ತಡೆಯಬೇಕು ಎಂದು ಆಗ್ರಹಿಸಿ ಮಲೆನಾಡು ಕನ್ನಡ ಪಡೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಕೇಂದ್ರ ವಿಮಾನಯಾನ ಸಚಿವರಿಗೆ ಮನವಿ ಸಲ್ಲಿಸಿದರು. (ಈ ಸುದ್ದಿಯನ್ನು ಇನ್ನು 52 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ವಿಮಾನ ನಿಲ್ದಾಣವು ಮಲೆನಾಡು ಭಾಗದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುವ ಉದ್ದೇಶ ಹೊಂದಿದೆ. ಶಿವಮೊಗ್ಗ ಸೇರಿ ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೆ ವಿಮಾನಯಾನ ಸಂಪರ್ಕ ಕಲ್ಪಿಸುವ ಪ್ರಮುಖ ಸಾರಿಗೆ ಕೇಂದ್ರವಾಗಿದೆ. ಆದರೆ ನ.20ರಿಂದ ವಿಮಾನಯಾನ ಸೇವೆ ಸ್ಥಗಿತಗೊಳ್ಳಲಿರುವುದರಿಂದ ಪ್ರಯಾಣಿಕರು, ಉದ್ಯಮಿಗಳು, ವಿದ್ಯಾರ್ಥಿಗಳು, ಪ್ರವಾಸಿಗರು ಹಾಗೂ ತುರ್ತು ಪ್ರಯಾಣ ಮಾಡುವ ಸಾರ್ವಜನಿಕರಿಗೆ ತೊಂದರೆಯಾಗಲಿದೆ ಎಂದು ಮನವಿಯಲ್ಲಿ ಆತಂಕ ವ್ಯಕ್ತಪಡಿಸಿದರು.

ಜಿಲ್ಲೆಯು ಪ್ರವಾಸೋದ್ಯಮ, ಕೃಷಿ, ಕೈಗಾರಿಕೆ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಅಭಿವೃದ್ಧಿಯ ಸಾಕಷ್ಟು ಅವಕಾಶಗಳನ್ನು ಹೊಂದಿದೆ. ಜೋಗ ಜಲಪಾತ, ಸಕ್ರೆಬೈಲು ಆನೆ ಶಿಬಿರ, ಆಗುಂಬೆ ಸೇರಿದಂತೆ ಹಲವು ಪ್ರವಾಸಿ ತಾಣಗಳಿಗೆ ದೇಶದ ವಿವಿಧ ಭಾಗಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ವಿಮಾನಯಾನ ಸೇವೆ ಸ್ಥಗಿತಗೊಂಡರೆ ಜಿಲ್ಲೆಯ ಪ್ರವಾಸೋದ್ಯಮ ಹಾಗೂ ಆರ್ಥಿಕ ಚಟುವಟಿಕೆಗಳ ಮೇಲೂ ಪರಿಣಾಮ ಬೀರಲಿದೆ ಎಂದು ತಿಳಿಸಿದರು.
ಮಲೆನಾಡು ಕನ್ನಡ ಪಡೆಯ ಸಂಸ್ಥಾಪಕ ಮಲ್ಲಿಕಾರ್ಜುನ ಮರಡಿ, ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಪೂಜಾರಿ, ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಶ್ರುತಿ ಪ್ರಮೋದ್, ಗ್ರಾಮಾಂತರ ಕಾರ್ಯದರ್ಶಿ ಸಯ್ಯದ್ ಜಮಾಲ್, ಪ್ರಮೋದ್ ಇದ್ದರು.