ಶಿವಮೊಗ್ಗ: ಗಣಪತಿ ಮೂರ್ತಿ ಮತ್ತು ನಾಗರ ಕಲ್ಲನ್ನು (Idols) ಕಿತ್ತೆಸೆದ ಆರೋಪದ ಹಿನ್ನೆಲೆ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಕಳೆದ ರಾತ್ರಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ದೌಡಾಯಿಸಿ ಪರಿಶೀಲಿಸಿದರು. ಶಾಸಕ ಎಸ್.ಎನ್.ಚನ್ನಬಸಪ್ಪ ಭೇಟಿ ನೀಡಿ ಆಕ್ರೋಶ ವ್ಯಕ್ತಪಡಿಸಿದರು.
ಬಡಾವಣೆಯ ನಿರ್ಮಾಣ ಹಂತದ ಕಟ್ಟಡವೊಂದರ ಮುಂಭಾಗ ಖಾಲಿ ಜಾಗವಿದೆ. ಅಲ್ಲಿ ಕಟ್ಟೆ ನಿರ್ಮಿಸಿ ಗಣಪತಿ ಮತ್ತು ನಾಗರ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗಿತ್ತು. ನಿರ್ಮಾಣ ಹಂತದ ಕಟ್ಟಡದಲ್ಲಿ ಅನ್ಯಕೋಮಿನ ವ್ಯಕ್ತಿಯೊಬ್ಬ ತಂಗಿದ್ದ. ಶನಿವಾರ ಈ ಮನೆ ಬಳಿ ಬಂದಿದ್ದ ಆ ವ್ಯಕ್ತಿಯ ಸ್ನೇಹಿತ ನಾಗರ ಕಲ್ಲನ್ನು ಕಿತ್ತೆಸೆದಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸ್ಥಳದಲ್ಲಿ ಬಿಗುವಿನ ವಾತಾವರಣ
ಅನ್ಯಕೋಮಿನ ಯುವಕರು ನಾಗರ ಕಲ್ಲನ್ನು ಕಿತ್ತೆಸೆದಿದ್ದಾರೆ ಎಂಬ ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರು, ಆಕ್ರೋಶ ವ್ಯಕ್ತಪಡಿಸಿದರು. ದೇವರ ವಿಗ್ರಹ ಕಿತ್ತೆಸೆದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಪೊಲೀಸರು ದೌಡು, ಪರಿಶೀಲನೆ
ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ಮಾಡಿದರು. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಎಎಸ್‌ಪಿ ಸಿ.ಜಿ.ಕಾರ್ಯಪ್ಪ, ಡಿವೈಎಸ್‌ಪಿ ಸಂಜೀವ್ ಕುಮಾರ್, ವಿವಿಧ ಠಾಣೆಗಳ ಇನ್ಸ್‌ಪೆಕ್ಟರ್‌ಗಳು ಸೇರಿ ಪೊಲೀಸ್ ಸಿಬ್ಬಂದಿ ಇದ್ದರು. ಘಟನೆ ಸಂಬಂಧ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದ್ದು, ಅವರ ಹೆಸರು ಬಹಿರಂಗಪಡಿಸಿಲ್ಲ.
ಇದನ್ನೂ ಓದಿ » ಸಿಗಂದೂರು ಸೇತುವೆ ಉದ್ಘಾಟನೆ ದಿನಾಂಕ ಪ್ರಕಟಿಸಿದ ಸಂಸದ ರಾಘವೇಂದ್ರ

ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ, ಆಕ್ರೋಶ
ಇನ್ನು, ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆ ಶನಿವಾರ ರಾತ್ರಿಯೆ ಶಾಸಕ ಎಸ್.ಎನ್.ಚನ್ನಬಸಪ್ಪ ಮತ್ತು ಬಿಜೆಪಿ ನಗರ ಘಟಕದ ಮುಖಂಡರು ಸ್ಥಳಕ್ಕೆ ಭೇಟಿ ನೀಡಿದ್ದರು. ಘಟನೆ ಕುರಿತು ಸ್ಥಳೀಯರಿಂದ ಮಾಹಿತಿ ಪಡೆದರು. ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಅವರೊಂದಿಗೆ ದೂರವಾಣಿಯಲ್ಲಿ ಚರ್ಚೆ ನಡೆಸಿದರು.

ಬೆಳಗ್ಗೆ ಈಶ್ವರಪ್ಪ ಭೇಟಿ, ಘಟನೆ ವಿರುದ್ಧ ಗರಂ
ಭಾನುವಾರ ಬೆಳಗ್ಗೆ ರಾಷ್ಟ್ರಭಕ್ತರ ಬಳಗದ ಪ್ರಮುಖರು ರಾಗಿಗುಡ್ಡದ ಬಂಗಾರಪ್ಪ ಬಡಾವಣೆಗೆ ಭೇಟಿ ನೀಡಿದ್ದರು. ಸ್ಥಳೀಯರ ಜೊತೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಚರ್ಚೆ ನಡೆಸಿದರು. ಬಳಿಕ ಬಡಾವಣೆಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿರುವ ಕಟ್ಟಡಗಳನ್ನು ತೆರವು ಮಾಡಬೇಕು ಎಂದು ಪಾಲಿಕೆ ಆಯುಕ್ತ ಮಾಯಣ್ಣಗೌಡ ಅವರಿಗೆ ಸೋಮವಾರ ಸಂಜೆವರೆಗೆ ಗಡುವು ನೀಡಿದ್ದಾರೆ.

ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಸದ್ಯ ಮುಂಜಾಗ್ರತ ಕ್ರವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200