ಶಿವಮೊಗ್ಗ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಆಯೋಜಿಸಲಾಗಿತ್ತು. (ಈ ಸುದ್ದಿಯನ್ನು ಇನ್ನು 51 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉಪವಿಭಾಗಾಧಿಕಾರಿ ಡಾ. ಮೈತ್ರಿ ಹೆಚ್.ಪಿ.ಎಸ್. ಅವರು, ಧರ್ಮಸ್ಥಳ ಸಂಸ್ಥೆಯ ಮಹಿಳಾ ಸಬಲೀಕರಣ ಹಾಗೂ ಸಾಮಾಜಿಕ ಕಾರ್ಯಕ್ರಮಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಉದ್ಯಮಿ ಸುರೇಶ್ ಬಾಳೆಗುಂಡಿ ಮಾತನಾಡಿ, ಧರ್ಮಾಧಿಕಾರಿಗಳ ಮಾರ್ಗದರ್ಶನದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶದ ಜನರಿಗೆ ಉತ್ತಮ ಕಾರ್ಯಕ್ರಮಗಳು ತಲುಪುತ್ತಿವೆ ಎಂದರು.

ಕಾರ್ಯಕ್ರಮದಲ್ಲಿ ‘ಆಧುನಿಕ ಯುಗದಲ್ಲಿ ಒತ್ತಡರಹಿತ ಜೀವನ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ’ ವಿಷಯದ ಕುರಿತು ಸಂವಾದ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಹೊಸಪೇಟೆಯ ನ್ಯಾಯವಾದಿ ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರೆ ಜೆ.ಸಿ. ಸವಿತಾ ರಮೇಶ್ ಅವರು ಸಮಾಜದಲ್ಲಿ ಮಹಿಳೆಯರು ಎದುರಿಸುತ್ತಿರುವ ಸವಾಲುಗಳು ಮತ್ತು ಸ್ವಾವಲಂಬಿ ಬದುಕಿನ ಕುರಿತು ಉಪನ್ಯಾಸ ನೀಡಿದರು.
ಇದೇ ಸಂದರ್ಭ ಶಿವಮೊಗ್ಗ ತಾಲ್ಲೂಕಿನ ವಿವಿಧ ಕ್ಷೇತ್ರಗಳ ಸಾಧಕ ಮಹಿಳೆಯರನ್ನು ಸನ್ಮಾನಿಸಲಾಯಿತು. ಸಮಾವೇಶದಲ್ಲಿ ಜ್ಞಾನವಿಕಾಸ ಕೇಂದ್ರದ ಸುಮಾರು 650ಕ್ಕೂ ಹೆಚ್ಚು ಮಹಿಳಾ ಸದಸ್ಯರು ಪಾಲ್ಗೊಂಡಿದ್ದರು.
ಕಾರ್ಯಕ್ರಮದ ಭಾಗವಾಗಿ ಜ್ಞಾನವಿಕಾಸ ಸಂಸ್ಥೆಯ ಸದಸ್ಯರಿಂದ ವೈವಿಧ್ಯಮಯ ಸಾಂಸ್ಕೃತಿಕ ಪ್ರದರ್ಶನ, ಆಶು ಅಭಿನಯ, ಕಿರುಪ್ರಹಸನ, ನೃತ್ಯ ಸ್ಪರ್ಧೆ, ಶೃಂಗಾರ ಸ್ಪರ್ಧೆ, ಪುಷ್ಪಗುಚ್ಛ ಸ್ಪರ್ಧೆ ಹಾಗೂ ಆಕರ್ಷಕ ವಸ್ತು ಮಳಿಗೆ ಪ್ರದರ್ಶನ ನಡೆಯಿತು.