ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಡಿಸೆಂಬರ್ 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಮತ್ತು ಗಲಭೆ ಪ್ರಕರಣ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಲಭೆಕೋರರು ಯಾರೇ ಆದರೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಹಿರಿಯರ ಪುತ್ಥಳಿ ಹಾಳುಗೆಡವಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಈ ಸಂಬಂಧ ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.
ಉದ್ದೇಶಪೂರ್ವಕ ಗಲಭೆ
ಬೆಳಗಾವಿಯಲ್ಲಿ ಅಧಿವೇಶನ ನಡೆಯುವ ಸಂದರ್ಭ ಕೆಲವರು ಉದ್ದೇಶಪೂರ್ವಕವಾಗಿ ಗದ್ದಲ ಮಾಡಿಸುತ್ತಿದ್ದಾರೆ. ಹಿರಿಯರ ಪುತ್ಥಳಿ ಹಾಳುಗೆಡವಿರುವುದನ್ನು ಸಹಿಸಲು ಸಾಧ್ಯವಿಲ್ಲ. ಈ ಬಗ್ಗೆ ವಿಧಾನಸಭೆಯಲ್ಲಿ ನಾಳೆ ಸುದೀರ್ಘವಾಗಿ ಚರ್ಚೆ ಮಾಡುತ್ತೇನೆ. ಇನ್ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ ಎಂದು ತಿಳಿಸಿದರು.
23 ಮಂದಿಯ ಬಂಧನ
ರಾಯಣ್ಣ ಪ್ರತಿಮೆ ಧ್ವಂಸ, ಗಲಭೆ ಸಂಬಂಧ 23 ಮಂದಿಯನ್ನು ಈಗಾಗಲೇ ಬಂಧಿಸಿ ಹಿಂಡಲಗಾ ಜೈಲಿಗೆ ಕಳುಹಿಸಲಾಗಿದೆ. ಈ ಘಟನೆಯಲ್ಲಿ ಇನ್ನು ಯಾರೆಲ್ಲ ಶಾಮೀಲಾಗಿದ್ದಾರೋ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಈ ಸಂಬಂಧ ಕಠಿಣ ಕ್ರಮ ಜರುಗಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.
ವಾಸ್ತವ ಗೊತ್ತಿಲ್ಲದವರ ಆರೋಪ
ಎಂಇಎಸ್ ಈ ಮಟ್ಟಕ್ಕೆ ಬೆಳೆಯಲು ಬಿಜೆಪಿ ಪಕ್ಷ ನೀಡಿದ್ದ ಬೆಂಬಲವೇ ಕಾರಣ ಎಂಬ ಆರೋಪದ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ‘ಯಾರೋ ಕೆಲವರು ಸತ್ಯ ಸಂಗತಿ ತಿಳಿಯದೆ ಆರೋಪ ಮಾಡಿದ್ದಾರೆ. ಇಂತಹ ಆರೋಪಗಳಿಗೆ ಅರ್ಥವಿಲ್ಲ. ಈ ಪ್ರಕರಣದಲ್ಲಿ ಯಾರೆ ತಪ್ಪು ಮಾಡಿದರೂ ಕಠಿಣ ಕ್ರಮ ಜರುಗಿಸುತ್ತೇವೆ. ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸಿರುವುದೆ ಇದಕ್ಕೆ ಉದಾಹರಣೆ’ ಎಂದರು.
ಸಂಪುಟದ ವಿಚಾರ ಗೊತ್ತಿಲ್ಲ
ವಿಜಯೇಂದ್ರ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡುವ ಕುರಿತು ನಡೆಯುತ್ತಿರುವ ಚರ್ಚೆಗಳ ಕುರಿತು ಕೇಳಿದ ಪ್ರಶ್ನೆಗೆ, ‘ವಿಜಯೇಂದ್ರ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡುವ ವಿಚಾರ ಸಂಬಂಧ ತಮಗೇನು ಗೊತ್ತಿಲ್ಲ. ಇದು ಹೈಕಮಾಂಡ್’ಗೆ ಬಿಟ್ಟ ವಿಚಾರವಾಗಿದೆ. ಇನ್ನು, ಸಂಪುಟ ವಿಸ್ತರಣೆ ಕುರಿತು ತಮಗೆ ಯಾವುದೆ ಮಾಹಿತಿ ಇಲ್ಲ. ಈ ಬಗ್ಗೆ ಮುಖ್ಯಮಂತ್ರಿ ಅವರನ್ನೆ ಕೇಳಿ’ ಎಂದರು.
ಇನ್ನು, ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗುತ್ತದೆ. ವಿಧಾನ ಪರಿಷತ್’ನಲ್ಲೂ ನಮಗೆ ಬಹುಮತ ಸಿಗಲಿದೆ. ಮತಾಂತರ ನಿಷೇಧ ಕಾಯ್ದೆ ಜಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಶಿವಮೊಗ್ಗ – ಭದ್ರಾವತಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜ್ಯೋತಿಪ್ರಕಾಶ್ ಸೇರಿದಂತೆ ಹಲವರು ಈ ಸಂದರ್ಭ ಇದ್ದರು.