ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದಿದ್ದ ಭಾರತ್ ಜೋಡೋ ಯಾತ್ರೆಯ ನೆನಪಿಗಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವತಿಯಿಂದ ಶಿಕಾರಿಪುರದಿಂದ ಭಾರತ್ ಜೋಡೋ-2 ಯಾತ್ರೆ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ.
ಕೆಪಿಸಿಸಿ ರಾಜ್ಯ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ನೇತೃತ್ವದಲ್ಲಿ ಈ ಪಾದಯಾತ್ರೆ ನಡೆಯಲಿದೆ. ರಾಹುಲ್ ಗಾಂಧಿ ನೇತೃತ್ವದ ಯಾತ್ರೆಯು ಸೆಪ್ಟೆಂಬರ್ 30 ರಂದು ರಾಜ್ಯಕ್ಕೆ ಆಗಮಿಸಿದ ನೆನಪಿಗಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ದೇಶದ ಜನರಲ್ಲಿ ಸಹಬಾಳ್ವೆ, ಸಾಮರಸ್ಯ ಮೂಡಿಸುವುದು ಮತ್ತು ಸಾರ್ವಜನಿಕರ ಕುಂದುಕೊರತೆಗಳಿಗೆ ಧ್ವನಿಯಾಗುವುದು ಈ ಯಾತ್ರೆಯ ಮುಖ್ಯ ಉದ್ದೇಶವಾಗಿದೆ.

ಈ ಪಾದಯಾತ್ರೆಯ ದಿನಾಂಕ ನಿಗದಿಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ಅವರೊಂದಿಗೆ ಚರ್ಚಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ಸ್ಥಳೀಯ ಮುಖಂಡರೊಂದಿಗೆ ಸಮಾಲೋಚಿಸಿ ಶೀಘ್ರದಲ್ಲೇ ಅಧಿಕೃತ ದಿನಾಂಕ ಪ್ರಕಟಿಸಲಾಗುವುದು.
ಸಭೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ನಾರಾಯಣಸ್ವಾಮಿ, ಶಿಕಾರಿಪುರ ಗ್ಯಾರಂಟಿ ಸಮಿತಿ ಅನುಷ್ಠಾನ ಯೋಜನೆಯ ಅಧ್ಯಕ್ಷ ನಾಗರಾಜ್ ಗೌಡ, ಕೆಪಿಸಿಸಿ ಕಾರ್ಮಿಕ ವಿಭಾಗದ ಅಧ್ಯಕ್ಷ ಶಾಂತವೀರ ನಾಯಕ್, ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ರಮೇಶ್ ಶಂಕರಘಟ್ಟ, ಶಿವಮೊಗ್ಗ ಉತ್ತರ ಬ್ಲಾಕ್ ಅಧ್ಯಕ್ಷ ಶಿವಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಅನಿತಾ ಕುಮಾರಿ, ಮಧು ಉಪಸ್ಥಿತರಿದ್ದರು.