ಭಾರತ್‌ ಜೋಡೋ 2, ಶಿಕಾರಿಪುರದಿಂದಲೇ ಅಭಿಯಾನಕ್ಕೆ ಚಾಲನೆ, ಕಾರಣವೇನು?

ಶಿವಮೊಗ್ಗ: ಕಾಂಗ್ರೆಸ್ ಪಕ್ಷ ಸೋತಿರುವ ರಾಜ್ಯದ 82 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಘಟನೆ ಬಲಪಡಿಸುವ ಉದ್ದೇಶದಿಂದ ಶಿಕಾರಿಪುರದಿಂದ ಭಾರತ್ ಜೋಡೋ 2 ಪಾದಯಾತ್ರೆ ಆರಂಭಿಸಲಾಗುತ್ತಿದೆ. ಸೆಪ್ಟೆಂಬರ್‌ 30ರಂದು ಪಾದಯಾತ್ರೆಗೆ ಚಾಲನೆ ನೀಡಲಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ತಿಳಿಸಿದರು. (ಈ ಸುದ್ದಿಯನ್ನು ಇನ್ನು 70 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಕಾಂಗ್ರೆಸ್‌ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ಮೂಲ ಆಶಯಗಳನ್ನು ಮತ್ತೊಮ್ಮೆ ಜನರಿಗೆ ತಲುಪಿಸಲು ಭಾರತ್‌ ಜೋಡೋ 2 ರೂಪಿಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿನಿಧಿಸುವ ಶಿಕಾರಿಪುರದಿಂದಲೇ ರಾಜ್ಯಮಟ್ಟದ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ. ಪ್ರತಿ ಬೂತ್ ಮಟ್ಟದಲ್ಲಿ ಜನರನ್ನು ಸಂಪರ್ಕಿಸಿ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.

KPCC-Working-President-Manjunatha-Bhandari-Press-meet

ದೆಹಲಿಯಲ್ಲಿ ಹೈಕಮಾಂಡ್ ಸಭೆ ನಿಗದಿಯಾಗಿರುವ ಹಿನ್ನೆಲೆ ಮುಖ್ಯಮಂತ್ರಿ ಹಾಗೂ ಪ್ರಮುಖ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಹೀಗಾಗಿ ಜಿಲ್ಲೆಯ ಸಚಿವರು, ಶಾಸಕರು ಹಾಗೂ ಜಿಲ್ಲಾ ಕಾಂಗ್ರೆಸ್ ನಾಯಕರು ಪಾದಯಾತ್ರೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

– ಮಂಜುನಾಥ ಭಂಡಾರಿ, ಕೆಪಿಸಿಸಿ ಕಾರ್ಯಾಧ್ಯಕ್ಷ

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮ ನಡೆಯುತ್ತಿದೆ. ಕಾಂಗ್ರೆಸ್ ಬೆಂಬಲಿತ ಅಲ್ಪಸಂಖ್ಯಾತರು ಹಾಗೂ ಬಡ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ. ಹಿಂದೆ ಶಾಸಕರನ್ನು ಕದಿಯುತ್ತಿದ್ದವರು ಈಗ ಮತಗಳನ್ನು ಕಳ್ಳತನ ಮಾಡಲು ಹೊರಟಿದ್ದಾರೆ. ಪ್ರಜಾಪ್ರಭುತ್ವದ ಆಶಯಗಳಿಗೆ ಧಕ್ಕೆ ತರುತ್ತಿರುವ ಕೇಂದ್ರ ಚುನಾವಣಾ ಆಯುಕ್ತರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಬಾನು, ವಿಧಾನ ಪರಿಷತ್‌ ಮಾಜಿ ಸದಸ್ಯ ಆರ್. ಪ್ರಸನ್ನಕುಮಾರ್, ಜವಳಿ ನಿಗಮದ ಅಧ್ಯಕ್ಷ ಚೇತನ್ ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪಿ.ಓ. ಶಿವಕುಮಾರ್, ಎನ್. ರಮೇಶ್, ಮುಖಂಡರಾದ ಎಸ್.ಪಿ. ದಿನೇಶ್ ಹಾಗೂ ಎಸ್.ಟಿ. ಆಲಂ ಉಪಸ್ಥಿತರಿದ್ದರು.