ಶಿವಮೊಗ್ಗ: ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅಕ್ಟೋಬರ್ 12ರಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೀಡಾಗಿರುವ ರೈತರ ಸಮಸ್ಯೆ ಆಲಿಸಿ ಪಾದಯಾತ್ರೆ ನಡೆಸಲಿದ್ದಾರೆ.
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ರಾಮಕೃಷ್ಣ, ಅಕ್ಟೋಬರ್ 12ರ ಬೆಳಿಗ್ಗೆ 11.30ಕ್ಕೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಯದುವಾಳ–ಮುಡುವಾಳ ಮಾರ್ಗದಲ್ಲಿ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆ ನಡೆಸಿ, ರೈತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದರು.

ಆಯನೂರು, ಭದ್ರಾವತಿಯಲ್ಲಿ ಬಹಿರಂಗ ಸಭೆ
ಪಾದಯಾತ್ರೆಯ ನಂತರ ಹಾರನಹಳ್ಳಿ ಮಾರ್ಗವಾಗಿ ಆಯನೂರಿಗೆ ತೆರಳಿ, ಮಧ್ಯಾಹ್ನ 12 ಗಂಟೆಗೆ ಆಯೋಜಿಸಿರುವ ಬಹಿರಂಗ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ರೈತರ ಕುಂದುಕೊರತೆಗಳನ್ನು ಆಲಿಸಲಿದ್ದಾರೆ. ಬಳಿಕ ಭದ್ರಾವತಿ ತಾಲ್ಲೂಕಿಗೆ ತೆರಳಲಿರುವ ಅವರು, ಅಂಡರ್ ಬ್ರಿಡ್ಜ್ ಬಳಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಹಾಗೂ ಬಿ.ಹೆಚ್. ರಸ್ತೆಯ ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ನಂತರ ರಂಗಪ್ಪ ವೃತ್ತದ ಮೂಲಕ ಸಾಗಿ ತಾಲ್ಲೂಕು ಕಚೇರಿ ಬಳಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿಯಿಂದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ರೈತರಿಗೆ ಸೂಕ್ತ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ನಿಖಿಲ್ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದು, ರೈತರ ಸಾಲವನ್ನು ಸರ್ಕಾರ ಮನ್ನಾ ಮಾಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಸಾಲ ಮನ್ನಾ, ಕೃಷಿ ಪಂಪ್ ಸೆಟ್ಗಳಿವೆ 8 ಗಂಟೆ ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಿಖಿಲ್ ಕುಮಾರಸ್ವಾಮಿ ಯಾತ್ರೆ ಕೈಗೊಂಡಿದ್ದಾರೆ ಎಂದು ರಾಮಕೃಷ್ಣ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಗ್ರಾಮಾಂತರ ಘಟಕದ ಅಧ್ಯಕ್ಷ ಸತೀಶ್ ಕಸಟ್ಟಿ, ಮುಖಂಡರಾದ ಮಧುಕುಮಾರ್, ಶಿವಮೂರ್ತಿ ಬಿ. ನಾಯ್ಕ, ಯೋಗೀಶ್ ಹಾಗೂ ನಾಗೇಶ್ ಉಪಸ್ಥಿತರಿದ್ದರು.