ರಾಹುಲ್‌ ಗಾಂಧಿ ವಿರುದ್ಧ FIR, ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಗರಂ, ಏನಿದು ಪ್ರಕರಣ?

ಶಿವಮೊಗ್ಗ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿರುವುದನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ ಮುಖಂಡರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್‌ ಕಚೇರಿಯಿಂದ ಮಹಾವೀರ ವೃತ್ತದವರೆಗೆ ಮೆರವಣಿಗೆ ನಡೆಸಲಾಯಿತು.

ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಎಫ್‌ಐಆರ್‌ ರದ್ದುಪಡಿಸಬೇಕು ಎಂದು ಆಗ್ರಹಿಸಿದರು. ಕಾಂಗ್ರೆಸ್‌ ಜಿಲ್ಲಾ ಅಧ್ಯಕ್ಷ ಆರ್‌.ಪ್ರಸನ್ನ ಕುಮಾರ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

Congress-Workers-Protest-against-FIR-lodged-against-Rahul-Gandhi

ಎಫ್‌ಐಆರ್‌ ಆಗಿದ್ದೆಲ್ಲಿ?

ಉತ್ತರಖಂಡ ರಾಜ್ಯದ ಹಲ್ದ್ವಾನಿಯಲ್ಲಿ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿದ್ದ ಕಾರ್ಯಕ್ರಮದ ಸ್ಥಳವನ್ನು ಶುದ್ಧೀಕರಣ ಮಾಡಲಾಗಿತ್ತು. ಇದನ್ನು ಖಂಡಿಸಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಅವರು ನೀಡಿರುವ ಹೇಳಿಕೆ ಪರಿಶಿಷ್ಟ ಜಾತಿ, ಪಂಗಡದ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿವೆ ಎಂದು ಶ್ರೀರಾಮ ಸೇನಾ ಧರ್ಮಾರ್ಥ ಸೇವಾ ನ್ಯಾಸ್‌ನ ಕಾರ್ಯಕರ್ತ ಅಮಿತ್ ಕುಮಾರ್ ದೂರು ನೀಡಿದ್ದರು. ಕೋಟ್ವಾಲಿ ಪೊಲೀಸ್‌ ಠಾಣೆಯಲ್ಲಿ ರಾಹುಲ್‌ ಗಾಂಧಿ ವಿರುದ್ಧ ಪ್ರಕರಣ ದಾಖಲಾಗಿದೆ. ಎಫ್‌ಐಆರ್‌ ದಾಖಲು ವಿರುದ್ಧ ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಇದರ ವಿಡಿಯೋ ಇಲ್ಲಿದೆ.

ಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್‌, ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಎಸ್‌.ಕೆ.ಮರಿಯಪ್ಪ, ಹಾಪ್‌ಕಾಮ್ಸ್‌ ಜಿಲ್ಲಾ ಅಧ್ಯಕ್ಷ ವಿಜಯ ಕುಮಾರ್‌, ಜವಳಿ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಚೇತನ್‌ ಕೆ.ಗೌಡ, ವಿವಿಧ ಬ್ಲಾಕ್‌ಗಳ ಅಧ್ಯಕ್ಷರು, ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಇದ್ದರು.