ಶಿವಮೊಗ್ಗ ಲೈವ್.ಕಾಂ | SHIMOGA | 11 ಫೆಬ್ರವರಿ 2020

ಜಿಲ್ಲೆಯಲ್ಲಿ ಗುರುತಿಸಲಾಗಿರುವ 28 ಮರಳು ಬ್ಲಾಕ್ ಗಳಲ್ಲಿ ಮರಳುಗಾರಿಕೆ ಆರಂಭಿಸಲು ಅನುಮತಿ ನೀಡುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮರಳು ಸಮಿತಿ ಸಭೆಯಲ್ಲಿ ಮಾತನಾಡಿ, ನದಿಯ ಕೆಲವೆಡೆ ನೀರು ಇಳಿಯದ ಕಾರಣ ಮರಳುಗಾರಿಕೆ ಆರಂಭವಾಗಿಲ್ಲ. 28 ಬ್ಲಾಕ್’ಗಳ ಪೈಕಿ ಎಂಟರಲ್ಲಿ ಮರಳುಗಾರಿಕೆ ಪ್ರಾರಂಭಿಸಲಾಗಿದೆ ಎಂದು ಹೇಳಿದರು.
ತೀರ್ಥಹಳ್ಳಿಯಲ್ಲಿರುವ 13 ಮರಳು ಬ್ಲಾಕ್’ಗಳ ಪೈಕಿ ಎರಡು ಬ್ಲಾಕ್’ಗಳಲ್ಲಿ ಮರಳುಗಾರಿಕೆ ಆರಂಭವಾಗಿದೆ. ಇನ್ನುಳಿದ ಕಡೆ ಒಂದು ವಾರದೊಳಗೆ ಪ್ರಾರಂಭಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಅಕ್ರಮ ಮರಳುಗಾರಿಕೆ ಕುರಿತು ದೂರುಗಳು ಬರುತ್ತಿದ್ದು, ಅದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಪೊಲೀಸ್, ಕಂದಾಯ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಜಂಟಿಯಾಗಿ ಕಾರ್ಯ ನಿರ್ವಹಿಸಬೇಕು. ಕೋಟೆಗಂಗೂರಿನಲ್ಲಿ ಅಕ್ರಮ ಗಣಿಗಾರಿಕೆ ಮೇಲೆ ನಿಗಾ ಇರಿಸಲು ಮೂರು ಇಲಾಖೆಗಳು ಜಂಟಿಯಾಗಿ ಚೆಕ್ ಪೋಸ್ಟ್ ಆರಂಭಿಸಬೇಕು. ಜಿಲ್ಲೆಯಲ್ಲಿರುವ ಎಲ್ಲ ಚೆಕ್ಪೋಸ್ಟ್ಗಳಲ್ಲಿ ಅಗತ್ಯ ಹೋಮ್ ಗಾರ್ಡ್ ನಿಯೋಜಿಸಬೇಕೆಂದು ನಿರ್ದೇಶನ ನೀಡಿದರು.

ಕಲ್ಲು ಗಣಿಗಾರಿಕೆ ಮೇಲೆ ನಿಗಾ
ಅನಧಿಕೃತ ಕಲ್ಲು ಗಣಿಗಾರಿಕೆ ಮೇಲೆ ನಿಗಾ ಇರಿಸಿ, ಯಾವುದೇ ಕಾರಣಕ್ಕೂ ಗಣಿಗಾರಿಕೆಗೆ ಅವಕಾಶ ನೀಡಬಾರದು. ಕಾರಿಗೆ ಅನುಮತಿ ನೀಡುವ ಸಂದರ್ಭ ಮಾರ್ಗಸೂಚಿಯನ್ನು ಅನುಸರಿಸಬೇಕು. ಗ್ರಾಮ ಠಾಣಾದಿಂದ 500 ಮೀಟರ್ ವ್ಯಾಪ್ತಿಯೊಳಗೆ ರಾಷ್ಟ್ರೀಯ ಹೆದ್ದಾರಿಯಿಂದ 200 ಮೀಟರ್ ಒಳಗೆ, 50ಕ್ಕೂ ಹೆಚ್ಚಿನ ಜನವಸತಿ ಇರುವ ಪ್ರದೇಶ ಸೇರಿದಂತೆ ಹಲವು ನಿಬಂಧನೆಗಳನ್ನು ವಿಧಿಸಲಾಗಿದ್ದು ಯಾವುದೇ ಕಾರಣಕ್ಕೂ ಮಾರ್ಗಸೂಚಿ ಉಲ್ಲಂಘಿಸಬಾರದು ಎಂದು ಸೂಚನೆ ನೀಡಿದರು.
ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜು, ಜಿಲ್ಲಾ ಪಂಚಾಯಿತಿ ಸಿಇಓ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಇತರರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
