ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ನೀರಿಲ್ಲದೆ ಒಣಗುತ್ತಿರುವ ಅಡಿಕೆ ಹಾಗೂ ತೆಂಗಿನ ತೋಟಗಳನ್ನು ರಕ್ಷಿಸಲು ಭದ್ರಾ ನಾಲೆಗಳಿಗೆ ನೀರು ಹರಿಸಲು ಸರ್ಕಾರ ತೀರ್ಮಾನಿಸಿದೆ ಎಂದು ರೈತ ಸಂಘದ ರಾಜ್ಯ ಅಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ತಿಳಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 58 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಈ ಸಂಬಂಧ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಹೆಚ್.ಆರ್.ಬಸವರಾಜಪ್ಪ, ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ್ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಜೊತೆಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿಸಿದರು.

ಕಾನ್ಫರೆನ್ಸ್ ಕರೆ ಮೂಲಕ ಚರ್ಚೆ
ಚರ್ಚೆಯ ವೇಳೆ ಕಾನ್ಫರೆನ್ಸ್ ಕರೆ ಮೂಲಕ ತಾವು ಕೂಡ ಸಚಿವರೊಂದಿಗೆ ಮಾತನಾಡಿ ಅಚ್ಚುಕಟ್ಟು ಪ್ರದೇಶದ ರೈತರ ಸಂಕಷ್ಟವನ್ನು ಸರ್ಕಾರದ ಗಮನಕ್ಕೆ ತಂದಿರುವುದಾಗಿ ಹೆಚ್.ಆರ್.ಬಸವರಾಜಪ್ಪ ಹೇಳಿದ್ದಾರೆ.
ಸರ್ಕಾರದ ನಿರ್ಧಾರದಂತೆ ನಾಳೆಯಿಂದಲೇ ಭದ್ರಾ ಬಲದಂಡೆ ನಾಲೆಗೆ 10 ದಿನ 1,500 ಕ್ಯೂಸೆಕ್, ಎಡದಂಡೆ ನಾಲೆಗೆ 10 ದಿನಗಳ ಕಾಲ 500 ಕ್ಯೂಸೆಕ್ ಹಾಗೂ ಗೊಂದಿನಾಲೆಗೆ ನೀರು ಹರಿಸಲಾಗುವುದು. ಇಂದು ಸರ್ಕಾರಿ ರಜೆ ಇರುವುದರಿಂದ ನಾಳೆ ಅಧಿಕೃತ ಆದೇಶದ ಪ್ರತಿ ಹೊರಬೀಳಲಿದೆ ಎಂದು ತಿಳಿಸಿದ್ದಾರೆ.
ಕಳೆದ ಒಂದು ವಾರದಿಂದ ನಡೆಸಿದ ಸುದೀರ್ಘ ಪ್ರಯತ್ನಕ್ಕೆ ಫಲ ಸಿಕ್ಕಿದೆ. ರೈತರ ಮನವಿಗೆ ತಕ್ಷಣ ಸ್ಪಂದಿಸಿ ನೀರು ಹರಿಸಲು ತೀರ್ಮಾನಿಸಿದ ಮುಖ್ಯಮಂತ್ರಿಗಳು, ನೀರಾವರಿ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕ ಸಂಗಮೇಶ್ವರ್ ಅವರಿಗೆ ರೈತರ ಪರವಾಗಿ ಧನ್ಯವಾದ ಸಲ್ಲಿಸುತ್ತೇನೆ.
– ಹೆಚ್.ಆರ್.ಬಸವರಾಜಪ್ಪ, ರಾಜ್ಯ ಅಧ್ಯಕ್ಷ, ರೈತ ಸಂಘ