NEWS HIGHLIGHTS
ಸಾಗರ: ತಾಲೂಕಿನ ತಾಳಗುಪ್ಪ ರೈಲು ನಿಲ್ದಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅವರು ಭೇಟಿ ನೀಡಿ, ಕೇಂದ್ರ ಸರ್ಕಾರದ ಅಮೃತ ಭಾರತ್ ಸ್ಟೇಷನ್ ಯೋಜನೆಯಡಿ ನಡೆಯುತ್ತಿರುವ ವಿವಿಧ ಆಧುನೀಕರಣ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.
ಬಳಿಕ ಮಾತನಾಡಿದ ಅವರು, ‘ರೈಲ್ವೆ ಸಂಪರ್ಕವು ಮಲೆನಾಡು ಭಾಗದ ಆರ್ಥಿಕ ಬೆಳವಣಿಗೆ, ಪ್ರವಾಸೋದ್ಯಮ ಅಭಿವೃದ್ಧಿ ಹಾಗೂ ಜನರ ಸಂಚಾರ ಸೌಲಭ್ಯವನ್ನು ಬಲಪಡಿಸುವ ಪ್ರಮುಖ ಮೂಲಸೌಕರ್ಯವಾಗಿದೆ. ತಾಳಗುಪ್ಪ ನಿಲ್ದಾಣದ ಸಮಗ್ರ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಇನ್ನಷ್ಟು ಉತ್ತಮ ಸೌಲಭ್ಯಗಳು ಲಭ್ಯವಾಗಲಿದ್ದು, ಈ ಭಾಗದ ಪ್ರಗತಿಗೆ ಹೊಸ ಚೈತನ್ಯ ದೊರೆಯಲಿದೆ’ ಎಂದರು.

ದೇಶಾದ್ಯಂತ ರೈಲ್ವೆ ಮೂಲಸೌಕರ್ಯಕ್ಕೆ ಆದ್ಯತೆ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಇದೇ ಸಂದರ್ಭದಲ್ಲಿ ಅವರು ಕೃತಜ್ಞತೆ ಸಲ್ಲಿಸಿದರು. ಮಾಜಿ ಸಚಿವ ಹೆಚ್.ಹಾಲಪ್ಪ, ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.