ಸಾಗರ: ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ. ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಮುಂಬಾಳು ಗ್ರಾಮದ ಬಳಿ ಇಂದು ಬೆಳಿಗ್ಗೆ ಘಟನೆ ಸಂಭವಿಸಿದೆ. (ಈ ಸುದ್ದಿಯನ್ನು ಇನ್ನು 45 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಬಸ್ಸು ಬೆಂಗಳೂರಿನಿಂದ ಸಾಗರಕ್ಕೆ ತೆರಳುತ್ತಿದ್ದಾಗ ಬೆಂಕಿ ಹೊತ್ತಿದೆ. ಚಾಲಕ ಹಾಗೂ ಕ್ಲೀನರ್ ಸಮಯಪ್ರಜ್ಞೆಯಿಂದಾಗಿ ಅನಾಹುತ ತಪ್ಪಿದೆ.

ಶಿವಮೊಗ್ಗದಲ್ಲಿ ಇಳಿದಿದ್ದ ಪ್ರಯಾಣಿಕರು
ಬೆಂಗಳೂರಿನಿಂದ ಹೊರಟಿದ್ದ ಬಸ್‌ನಲ್ಲಿದ್ದ ಬಹುತೇಕ ಪ್ರಯಾಣಿಕರು ಶಿವಮೊಗ್ಗದಲ್ಲಿ ಇಳಿದುಕೊಂಡಿದ್ದರು. ಸಾಗರಕ್ಕೆ ಇಬ್ಬರು ಪ್ರಯಾಣಿಕರು ಮಾತ್ರ ಪ್ರಯಾಣಿಸುತ್ತಿದ್ದರು. ಮುಂಬಾಳು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ.
ಚಾಲಕ ತಕ್ಷಣ ಬಸ್ಸನ್ನು ರಸ್ತೆ ಬದಿ ನಿಲ್ಲಿಸಿದ್ದಾರೆ. ಚಾಲಕ ಹಾಗೂ ಕ್ಲೀನರ್ ಕೂಡಲೇ ಕಾರ್ಯಪ್ರವೃತ್ತರಾಗಿ ಬಸ್‌ನಲ್ಲಿದ್ದ ಇಬ್ಬರು ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗೆ ಇಳಿಸಿದ್ದಾರೆ. ಕೆಲವೇ ಕ್ಷಣದಲ್ಲಿ ಇಡೀ ಬಸ್‌ಗೆ ಬೆಂಕಿ ಆವರಿಸಿ ಸಂಪೂರ್ಣ ಸುಟ್ಟು ಹೋಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ವಿಷಯ ತಿಳಿಯುತ್ತಿದ್ದಂತೆ ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.