SHIVAMOGGA LIVE NEWS | 7 MARCH 2023
SAGARA : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಮಗ ಪ್ರಶಾಂತ್ ನಡೆಸಿರುವ ಭ್ರಷ್ಟಾಚಾರಕ್ಕೆ ಬಸವರಾಜ ಬೊಮ್ಮಾಯಿ ಅವರು ನೈತಿಕ ಹೊಣೆ ಹೊರಬೇಕು. ಮುಖ್ಯಮಂತ್ರಿ (CM) ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ಮಾರ್ಚ್ 9ರಂದು ಸಾಗರ ಬಂದ್ ಮಾಡಿ, ಪ್ರತಿಭಟನೆ ನಡೆಸಲಾಗುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಆರ್.ಜಯಂತ್ ಅವರು, ಮಾರ್ಚ್ 9ರಂದು ಬೆಳಗ್ಗೆ 9 ರಿಂದ 11 ಗಂಟೆವರೆಗೆ ಸಾಗರ ಪಟ್ಟಣ ಬಂದ್ ಮಾಡಲಾಗುತ್ತದೆ. ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿ ಉಪವಿಭಾಗಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುತ್ತದೆ. ಬಂದ್ ಗೆ ಸಾಗರದ ವರ್ತಕರು, ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಬಿಜೆಪಿ ಸರ್ಕಾರ ರಚನೆಯಾದಾಗಿನಿಂದ ರಾಜ್ಯದಲ್ಲಿ ಭ್ರಷ್ಟಾಚಾರ ಎಲ್ಲೆ ಮೀರಿದೆ. ಕೋಟ್ಯಂತರ ರುಪಾಯಿ ಹಣದೊಂದಿಗೆ ಶಾಸಕರ ಮಗ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವುದು ಇದಕ್ಕೆ ಉದಾಹರಣೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದರ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ (CM) ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ – ಐರಾವತದಲ್ಲಿ ಶಿವಮೊಗ್ಗಕ್ಕೆ ಬಂದಿಳಿದ ದಂಪತಿಗೆ ಬಸ್ ನಿಲ್ದಾಣದಲ್ಲಿ ಕಾದಿತ್ತು ಶಾಕ್, ತಡವಾಗಿ ದೂರು ದಾಖಲು
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ.ರಾಜನಂದಿನಿ ಕಾಗೋಡು ಸೇರಿ ಹಲವು ಪ್ರಮುಖರು ಸುದ್ದಿಗೋಷ್ಠಿಯಲ್ಲಿದ್ದರು.