ಆಯನೂರು: ರಾಜ್ಯ ಸರ್ಕಾರ ತಕ್ಷಣವೇ ಇಡೀ ರಾಜ್ಯವನ್ನು ಬರಪೀಡಿತ ಎಂದು ಘೋಷಿಸಬೇಕು. ಅಸಡ್ಡೆ ಮುಂದುವರೆಸಿದರೆ ರೈತರೆಲ್ಲರೂ ಸೇರಿ ವಿಧಾನಸೌಧದ ಮುಂದೆ ಬೃಹತ್ ಹೋರಾಟ ನಡೆಸಲಿದ್ದಾರೆ. ಈ ಹಿಂದೆ ಕುಮಾರಸ್ವಾಮಿ ಅವರು ತೋರಿದ ದಿಟ್ಟತನವನ್ನು ರಾಜ್ಯ ಸರ್ಕಾರ ಪ್ರದರ್ಶಿಸಲಿ ಎಂದು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಸವಾಲು ಹಾಕಿದರು.
ಶಿವಮೊಗ್ಗ ತಾಲ್ಲೂಕಿನ ತ್ಯಾಜವಳ್ಳಿ ಗ್ರಾಮದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಕೇವಲ 220 ತಾಲ್ಲೂಕುಗಳನ್ನು ಮಾತ್ರ ಬರಪೀಡಿತ ಎಂದು ಘೋಷಿಸಿ ಕೈತೊಳೆದುಕೊಂಡಿದೆ. ಇಡೀ ರಾಜ್ಯದಲ್ಲಿ ಮಳೆ ಕೊರತೆಯಿಂದ ಕೃಷಿ ವಲಯ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸಂಪೂರ್ಣ ರಾಜ್ಯವನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಬೇಕು. ಕಳೆದ ಮೂರೂವರೆ ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ ಮೂರೂವರೆ ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಸರ್ಕಾರದ ರೈತವಿರೋಧಿ ಧೋರಣೆ ಹಾಗೂ ಸಂಕಷ್ಟಕ್ಕೆ ಸ್ಪಂದಿಸದ ನಡವಳಿಕೆಯಿಂದ ಅನ್ನದಾತರು ಜಾಗೃತರಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶಗೊಂಡಿದ್ದಾರೆ ಎಂದರು.

ರಾಜ್ಯ ಸರ್ಕಾರ ಎಕರೆಗೆ ₹2500 ಪರಿಹಾರ ಘೋಷಿಸಿದೆ. ಪ್ರತಿ ಎಕರೆಗೆ ಕನಿಷ್ಠ ₹25,000 ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಅಲ್ಲದೆ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭ ರೈತರ ಸಾಲ ಮನ್ನಾ ಮಾಡಿದ್ದರು. ಅದೇ ರೀತಿಯ ದಿಟ್ಟತವನ್ನು ರಾಜ್ಯ ಸರ್ಕಾರ ಪ್ರದರ್ಶಿಸಲಿ ಎಂದು ನಿಖಿಲ್ ಕುಮಾರಸ್ವಾಮಿ ಸವಾಲು ಹಾಕಿದರು.
ಹೊಲಕ್ಕೆ ಭೇಟಿ ನೀಡಿದ ನಿಖಿಲ್
ಇದೇ ವೇಳೆ ನಿಖಿಲ್ ಕುಮಾರಸ್ವಾಮಿ ಅವರು ಆಯನೂರಿನ ಹೊಲಕ್ಕೆ ಭೇಟಿ ನೀಡಿ ಒಣಗಿದ ಮೆಕ್ಕೆ ಜೋಳ ಪರಿಶೀಲಿಸಿದರು. ಮಳೆ ಕೊರತೆಯಿಂದಾಗಿ ಬೆಳೆ ಒಣಗಿರುವುದನ್ನು ಪರಿಶೀಲಿಸಿ ತೆರಳಿದರು. ತೀವ್ರ ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್, ವಿಧಾನ ಪರಿಷತ್ ಸದಸ್ಯ ಭೋಜಾನಾಯ್ಕ್, ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್, ಜೆಡಿಎಸ್ ಪಕ್ಷದ ಜಿಲ್ಲಾ ಅಧ್ಯಕ್ಷ ರಾಮಕೃಷ್ಣ, ಪ್ರಮುಖರಾದ ಕಾಂತರಾಜ್ ಸೇರಿ ಹಲವರು ಇದ್ದರು.