ಶಿವಮೊಗ್ಗ: ಹಾಡೋನಹಳ್ಳಿ ಸಮೀಪದ ತುಂಗಭದ್ರಾ ನದಿ (Tungabhadra River) ಪಾತ್ರದಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳದ ಮೇಲೆ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಜಂಟಿ ದಾಳಿ ನಡೆಸಿದರು. ಈ ವೇಳೆ ಗಣಿಗಾರಿಕೆಗೆ ಬಳಸುತ್ತಿದ್ದ ವಸ್ತುಗಳು ಮತ್ತು ಮರಳನ್ನು ವಶಕ್ಕೆ ಪಡೆಯಲಾಗಿದೆ.
ಹಾಡೋನಹಳ್ಳಿ ಮತ್ತು ಮಂಗೋಟೆ ಗಡಿ ಭಾಗದ ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳುಗಾರಿಕೆ (Sand Mining) ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು, ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಮತ್ತು ಕಂದಾಯ ಇಲಾಖೆ ಅಧಿಕಾರಿಗಳ ತಂಡ ಜಂಟಿ ಕಾರ್ಯಾಚರಣೆ ನಡೆಸಿತು.

ಸ್ಥಳದಲ್ಲಿ ದಾಸ್ತಾನು ಮಾಡಲಾಗಿದ್ದ ಸುಮಾರು 12 ಮೆಟ್ರಿಕ್ ಟನ್ ಮರಳನ್ನು ವಶಕ್ಕೆ ಪಡೆಯಲಾಗಿದೆ. ಇದರ ಅಂದಾಜು ಮೌಲ್ಯ ₹10,200 ಎಂದು ತಿಳಿಸಲಾಗಿದೆ. ವಶಪಡಿಸಿಕೊಂಡ ಮರಳನ್ನು ಮುಂದಿನ ಕ್ರಮಕ್ಕಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ (Mines and Geology Department) ಆವರಣಕ್ಕೆ ಸ್ಥಳಾಂತರಿಸಲಾಗಿದೆ. ಗಣಿಗಾರಿಕೆಗೆ ಬಳಕೆ ಮಾಡುತ್ತಿದ್ದ ವಸ್ತುಗಳನ್ನು ಕೂಡ ವಶಕ್ಕೆ ಪಡೆಯಲಾಗಿದೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.