ತೀರ್ಥಹಳ್ಳಿಗೆ ಸಿಎಂ, ಎಲ್ಲೆಲ್ಲಿಗೆ ಭೇಟಿ ನೀಡಿದರು? ಯಾವೆಲ್ಲ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು?

ತೀರ್ಥಹಳ್ಳಿ: ಕಸ್ತೂರಿ ರಂಗನ್‌ ವರದಿ ಸಂಬಂಧ ಸಂವಾದ ಕಾರ್ಯಕ್ರಮದ ಹಿನ್ನೆಲೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಂದು ತೀರ್ಥಹಳ್ಳಿಗೆ ಆಗಮಿಸಿದ್ದರು. ಮಂಗಳೂರಿನಿಂದ ಹೆಲಿಕಾಪ್ಟರ್‌ನಲ್ಲಿ ತೀರ್ಥಹಳ್ಳಿಗೆ ಭೇಟಿ ನೀಡಿದ್ದರು.

ಬೆಳಿಗ್ಗೆ 11:30ರ ಹೊತ್ತಿಗೆ ಬಾಳೆಬೈಲಿನ ಜೂನಿಯರ್‌ ಕಾಲೇಜು ಮೈದಾನದಲ್ಲಿ ನಿರ್ಮಿಸಲಾಗಿದ್ದ ಹೆಲಿಪ್ಯಾಡ್‌ಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆಗಮಿಸಿದರು. ಜನಪ್ರತಿನಿಧಿಗಳು, ಅಧಿಕಾರಿಗಳು ಡಿ.ಕೆ.ಶಿವಕುಮಾರ್‌ ಅವರನ್ನು ಸ್ವಾಗತಿಸಿದರು.

Chief-Minister-DK-Shivakumar-Visit-to-Thirthahalli

ಎಲ್ಲೆಲ್ಲಿಗೆ ಭೇಟಿ ನೀಡಿದರು ಸಿಎಂ?

ಕಾರ್ಯಕ್ರಮ 1: ಟಿಎಪಿಸಿಎಂಎಸ್‌ ಅಮೃತ ಮಹೋತ್ಸವ

ತೀರ್ಥಹಳ್ಳಿ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ 75ನೇ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಉದ್ಘಾಟಿಸಿದರು.

‘ಜೊತೆಗೂಡುವುದು ಆರಂಭ, ಜೊತೆಗೂಡಿ ಆಲೋಚಿಸುವುದು ಪ್ರಗತಿ, ಜೊತೆಗೂಡಿ ಕೆಲಸ ಮಾಡುವುದು ಯಶಸ್ಸು. ಇದೇ ಸಹಕಾರ ತತ್ವ.‌ ಸಹಕಾರ ಪದ್ಧತಿಯಿಂದ ರೈತರ ಪ್ರಗತಿ ಸಾಧ್ಯವಾಗಿದೆʼ

– ಡಿ.ಕೆ.ಶಿವಕುಮಾರ್‌, ಮುಖ್ಯಮಂತ್ರಿ

ಕಾರ್ಯಕ್ರಮದಲ್ಲಿ ಸಚಿವ ಮಧು ಬಂಗಾರಪ್ಪ, ಶಾಸಕರಾದ ಅರಗ ಜ್ಞಾನೇಂದ್ರ, ಬೇಳೂರು ಗೋಪಾಲಕೃಷ್ಣ, ಮಾಜಿ ಸಚಿವ ಕಿಮ್ಮನೆ ರತ್ನಾಕರ್‌, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥ ಗೌಡ, ಕಾಂಗ್ರೆಸ್‌ ಪಕ್ಷದ ಜಿಲ್ಲಾ ಅಧ್ಯಕ್ಷ ಹೆಚ್‌.ಸಿ.ಯೋಗೇಶ್‌ ಸೇರಿ ಹಲವರು ಭಾಗವಹಿಸಿದ್ದರು.

ಕಾರ್ಯಕ್ರಮ 2: ಕಸ್ತೂರಿ ರಂಗನ್‌ ವರದಿ ಸಂವಾದ

ತೀರ್ಥಹಳ್ಳಿ ಪಟ್ಟಣದ ಜೂನಿಯರ್‌ ಕಾಲೇಜು ಮೈದಾನದಲ್ಲಿ ಕಸ್ತೂರಿ ರಂಗನ್‌ ವರದಿ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭಾಗವಹಿಸಿದ್ದರು. ದೊಡ್ಡ ಸಂಖ್ಯೆಯ ಜನರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ನೇರ ಸಂವಾದ ಕಾರ್ಯಕ್ರಮದಲ್ಲಿ ಅರಣ್ಯ ಸಚಿವ ರಾಮಲಿಂಗರೆಡ್ಡಿ, ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಂಸದ ಬಿ.ವೈ ರಾಘವೇಂದ್ರ, ಜಿಲ್ಲೆಯ ಶಾಸಕರು, ಅಧಿಕಾರಿಗಳು ವೇದಿಕೆಯಲ್ಲಿದ್ದರು.

ಕಾರ್ಯಕ್ರಮ 3: ಶ್ರೀ ರಾಮೇಶ್ವರ ದೇವಸ್ಥಾನ

ತೀರ್ಥಹಳ್ಳಿಯ ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭೇಟಿ ನೀಡಿದರು. ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಅರಗ ಜ್ಞಾನೇಂದ್ರ, ಬೇಳೂರು ಗೋಪಾಲಕೃಷ್ಣ ಸೇರಿ ಹಲವರು ಈ ಸಂದರ್ಭ ಇದ್ದರು.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಮಧ್ಯಾಹ್ನ ಹೆಲಿಕಾಪ್ಟರ್‌ನಲ್ಲಿ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿಗೆ ತೆರಳಿದರು.