ಶಿವಮೊಗ್ಗ ಲೈವ್
ತೀರ್ಥಹಳ್ಳಿ: ಕೇಂದ್ರದ ಎನ್‌ಡಿಎ ಸರ್ಕಾರವು ಇ.ಡಿ, ಐಟಿ ಹಾಗೂ ಸಿಬಿಐ ಸಂಸ್ಥೆಗಳನ್ನು ರಾಜಕೀಯ ಸ್ವಾರ್ಥಕ್ಕಾಗಿ ದುರುಪಯೋಗ ಪಡಿಸಿಕೊಳ್ಳುತ್ತಿರುವುದನ್ನು ಖಂಡಿಸಿ ಅಕ್ಟೋಬರ್ 12ರಂದು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಂಘರ್ಷ ಸಮಿತಿಯ (ನಾಗವಾರ ಬಣ) ಜಿಲ್ಲಾ ಘಟಕದ ಸಂಚಾಲಕ ಕೆ.ವಿ. ನಾಗರಾಜ್ ಅರಳಸುರಳಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರವು ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಿರೋಧ ಪಕ್ಷಗಳ ನೈತಿಕತೆಯನ್ನು ಕುಗ್ಗಿಸುವ ಯತ್ನ ನಡೆಸುತ್ತಿದೆ. ದೇಶದಲ್ಲಿ ಈವರೆಗೆ ನಡೆದಿರುವ ಶೇ 98ರಷ್ಟು ದಾಳಿಗಳು ರಾಜಕೀಯ ಪ್ರೇರಿತವಾಗಿದ್ದು, ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸಿ ವಾಮಮಾರ್ಗದಲ್ಲಿ ಅಧಿಕಾರ ಹಿಡಿಯುವ ಕುತಂತ್ರಕ್ಕೆ ಹಲವು ಸಾಕ್ಷಿಗಳಿವೆ ಎಂದು ಅವರು ಆರೋಪಿಸಿದ್ದಾರೆ.
